ರಾಜ್ಯದ ರೈತರು ಬರಗಾಲದಿಂದ ತತ್ತರಿಸಿದ್ದು, ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಕೇಂದ್ರ ಸರ್ಕಾರ ತಕ್ಷಣ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಭೀಮಣ್ಣ ಮೇಟಿ ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಬರ ಪರಿಹಾರದ ಮೊದಲ ಕಂತಿನ ₹2,500 ಹಾಗೂ ಎರಡನೇ ಕಂತಿನ ₹2,500 ರೈತರ ಖಾತೆಗೆ ಜಮಾ ಮಾಡುತ್ತಿದೆ. ಆದರೆ, ಕೇಂದ್ರ ಸರ್ಕಾರ ಇದುವರೆಗೆ ರೈತರಿಗೆ ನಯಾಪೈಸೆ ಪರಿಹಾರ ನೀಡಿಲ್ಲ ಎಂದು ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.
ರೈತರ ಸಂಕಷ್ಟದ ಬಗ್ಗೆ ಬಾಯಿ ಮಾತಿನಲ್ಲಿ ಕಾಳಜಿ ವ್ಯಕ್ತಪಡಿಸುವ ರಾಜ್ಯದ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ರೈತರ ಪರವಾಗಿ ಮಾತನಾಡುವ ಧೈರ್ಯ ತೋರುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಇದನ್ನು ಓದಿದ್ದೀರಾ? ಯಾದಗಿರಿ | ಉತ್ತರ ಕರ್ನಾಟಕದ ನಿರ್ಲಕ್ಷ್ಯ ಖಂಡಿಸಿ ಸರ್ಕಾರಿ ಆತಿಥ್ಯ, ಭತ್ಯೆ ತಿರಸ್ಕರಿಸಿದ ಶಾಸಕ ಶರಣಗೌಡ ಕಂದಕೂರ
ಬರಗಾಲದಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರೈತರ ನೆರವಿಗೆ ಧಾವಿಸಬೇಕಿತ್ತು. ಆದರೆ, ಪರಿಹಾರ ವಿತರಣೆಯಲ್ಲಿ ತಾರತಮ್ಯ ಮಾಡುತ್ತಿರುವುದು ಸರಿಯಲ್ಲ. ತಕ್ಷಣ ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಭೀಮಣ್ಣ ಮೇಟಿ ಒತ್ತಾಯಿಸಿದ್ದಾರೆ.




