ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ದೇಶದ ವಿವಿಧ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ಜಿಲ್ಲಾ ಘಟಕದ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿ, ಜಿಲ್ಲಾಧಿಕಾರಿಗಳ ಮುಖಾಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಸಂಚಾಲಕ ಶಿವಪುತ್ರ ಜವಳಿ ಮಾತನಾಡಿ, ‘ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿನ ಅವ್ಯವಸ್ಥೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ’ ಎಂದು ಹೇಳಿದರು.
‘ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ದಲಿತ ಸಂಘರ್ಷ ಸಮಿತಿ ಬೆಂಬಲ ವ್ಯಕ್ತಪಡಿಸಿತು. ವಿದ್ಯಾರ್ಥಿಗಳ ಬೇಡಿಕೆಗಳನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸುತ್ತಿರುವುದು ಖಂಡನೀಯವಾಗಿದ್ದು, ಪ್ರಜಾಪ್ರಭುತ್ವದಲ್ಲಿ ಶಾಂತಿಯುತ ಪ್ರತಿಭಟನೆಗಳಿಗೆ ಗೌರವ ನೀಡಬೇಕು’ ಎಂದು ಆಗ್ರಹಿಸಲಾಯಿತು.
‘ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಅಥವಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ದೇಶದ ಪರೀಕ್ಷಾ ವ್ಯವಸ್ಥೆಯನ್ನು ಸಮಗ್ರವಾಗಿ ಸುಧಾರಿಸಬೇಕು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗಿಸಿದ ಪ್ರಕರಣದ ಕುರಿತು ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಅಕ್ರಮಗಳಿಂದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ತೊಂದರೆಗೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಮತ್ತು ಸೂಕ್ತ ಪರಿಹಾರ ಒದಗಿಸಬೇಕು’ ಎಂದು ಒತ್ತಾಯಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ನೀಟ್ ಅಕ್ರಮ ಖಂಡಿಸಿ ಕರಾದಸಂಸ ಧರಣಿ; ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹ
ಧರಣಿಯಲ್ಲಿ ಚಂದಪ್ಪ ಮುನೆಪ್ಪನೋರ, ಶಿವಲಿಂಗ ಹಸನಾಪೂರ, ಮರೆಪ್ಪ ಕ್ರಾಂತಿ, ಶಿವಕುಮಾರ ತಳವಾರ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.





