ಶಹಾಪುರ ತಾಲೂಕಿನ ಮುಡಬುಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ತಕ್ಷಣ ನಿವಾರಿಸಬೇಕು. ಒಂದು ವಾರದೊಳಗೆ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಸಮಿತಿ ಎಚ್ಚರಿಕೆ ನೀಡಿದೆ.
ಸಂಘದ ಜಿಲ್ಲಾ ಕಾರ್ಯದರ್ಶಿ ಭೀಮರಾಯ ಪೂಜಾರಿ ಪತ್ರಿಕಾ ಪ್ರಕಟಣೆ ‘ಮೂಲಕ ಈ ಒತ್ತಾಯ ಮಾಡಿದ್ದು, ಮುಡಬುಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸಿಸಿ ರಸ್ತೆ ಹಾಗೂ ಸಮರ್ಪಕ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
‘ಪ್ರಸ್ತುತ ಗ್ರಾಮಗಳಲ್ಲಿ ರಸ್ತೆಗಳು ಹದಗೆಟ್ಟಿದ್ದು, ಮಳೆ ನೀರು ಮತ್ತು ಕೊಳಚೆ ನೀರು ರಸ್ತೆಗಳಲ್ಲಿ ನಿಂತ ಪರಿಣಾಮ ರೈತರು, ಮಹಿಳೆಯರು ಹಾಗೂ ಮಕ್ಕಳು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ತಾತ್ಕಾಲಿಕವಾಗಿ ರಸ್ತೆಗಳಿಗೆ ಮರುಮ್ಮತ್ತು ಮಾಡಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.
ಇದೇ ವೇಳೆ ‘ಮುಡಬುಳ ಗ್ರಾಮದಲ್ಲಿ ಸಾಮೂಹಿಕ ಶೌಚಾಲಯ ನಿರ್ಮಿಸಬೇಕು ಹಾಗೂ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸುವ ಕುರಿತು ಗ್ರಾಮ ಪಂಚಾಯಿತಿ ವತಿಯಿಂದ ಡಂಗೂರ ಸಾರಬೇಕು’ ಎಂದು ಆಗ್ರಹಿಸಿದರು.
‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸ್ವಇಚ್ಛೆಯಿಂದ ಅರ್ಜಿ ಸಲ್ಲಿಸಿರುವ ಬಡ ರೈತ ಮಹಿಳೆಯರ ಜಾಬ್ ಕಾರ್ಡ್‌ಗಳನ್ನು ಪರಿಶೀಲಿಸಿ, ಅರ್ಹರಿಗೆ ತಕ್ಷಣ ಉದ್ಯೋಗ ನೀಡಬೇಕು. ಜೊತೆಗೆ ಬಡ ರೈತ ಹಾಗೂ ಕೂಲಿ ಕಾರ್ಮಿಕರಿಗೆ ಮನೆ ನಿವೇಶನಗಳನ್ನು ಮಂಜೂರು ಮಾಡಬೇಕು’ ಎಂದು ಮನವಿ ಮಾಡಿದರು.
‘ಒಂದು ವಾರದೊಳಗೆ ಈ ಎಲ್ಲಾ ಬೇಡಿಕೆಗಳ ಕುರಿತು ಗ್ರಾಮ ಪಂಚಾಯಿತಿ ಆಡಳಿತ ಕ್ರಮ ಕೈಗೊಳ್ಳದಿದ್ದರೆ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು’ ಎಂದು ಭೀಮರಾಯ ಪೂಜಾರಿ ಎಚ್ಚರಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಬರಗಾಲ ಘೋಷಣೆಗೆ ಆಗ್ರಹಿಸಿ ರಸ್ತೆ ತಡೆ; ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆ
ಈ ಸಂದರ್ಭದಲ್ಲಿ ಮುಡಬುಳ ಗ್ರಾಮ ಘಟಕದ ಅಧ್ಯಕ್ಷೆ ಮಲ್ಲಮ್ಮ, ಉಪಾಧ್ಯಕ್ಷೆ ತಾಯಮ್ಮ, ಕಾರ್ಯದರ್ಶಿ ನೀಲಮ್ಮ, ಸಹ ಕಾರ್ಯದರ್ಶಿ ನಿಂಗಮ್ಮ, ಸಂಘಟನಾ ಕಾರ್ಯದರ್ಶಿ ಲಕ್ಷ್ಮಿ, ಖಜಾಂಚಿ ಲಕ್ಷ್ಮೀ ದಿಗ್ಗಿ, ಸಮಿತಿ ಸದಸ್ಯರಾದ ಸಾಬಮ್ಮ, ಅಯ್ಯಮ್ಮ, ಮಲ್ಲಿಕಾರ್ಜುನ ದಿಗ್ಗಿ, ತಿಪ್ಪಣ್ಣ ಕೊಂಡಗೋಳ ಸೇರಿದಂತೆ ರೈತ ಮಹಿಳೆಯರು ಉಪಸ್ಥಿತರಿದ್ದರು.




