ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮ ಹಾಗೂ ಅವ್ಯವಸ್ಥೆಯನ್ನು ಖಂಡಿಸಿ, ನವದೆಹಲಿಯಲ್ಲಿ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್‌ನ್ನು ವಿರೋಧಿಸಿ ಗುರುವಾರ ಶಹಾಪುರ ನಗರದಲ್ಲಿ ಸಮಾನ ಮನಸ್ಕರ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶಿಲ್ದಾರರ ಅವರಿಗೆ ಮನವಿ ಸಲ್ಲಿಸಿದರು.
ನಗರದ ಸರ್ಕಾರಿ ಪದವಿ ಕಾಲೇಜಿನಿಂದ ಆರಂಭವಾದ ಮೆರವಣಿಗೆ ಬಸವೇಶ್ವರ ವೃತ್ತದವರೆಗೆ ಸಾಗಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು, ಯುವಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ನೀಟ್ ಪರೀಕ್ಷೆಯ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮುಖಂಡರು ಮಾತನಾಡಿ, ‘ನೀಟ್ ಪರೀಕ್ಷೆಯಲ್ಲಿನ ಅವ್ಯವಸ್ಥೆಯಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಆತಂಕಕ್ಕೆ ಸಿಲುಕಿದ್ದು, ನ್ಯಾಯಕ್ಕಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ’ ಎಂದು ಆರೋಪಿಸಿದರು.
ಸಮಾನ ಮನಸ್ಕರ ವೇದಿಕೆ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಯುವಕರು, ವಿವಿಧ ಸಮಾಜಗಳ ಪ್ರತಿನಿಧಿಗಳು, ಕನ್ನಡಪರ ಹಾಗೂ ದಲಿತಪರ ಸಂಘಟನೆಗಳ ಮುಖಂಡರು ಸೇರಿದಂತೆ ಅನೇಕರು ಭಾಗವಹಿಸಿ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದರು.
ಇದನ್ನು ಓದಿದ್ದೀರಾ? ಯಾದಗಿರಿ | ನೀಟ್ ಅಕ್ರಮ, ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಕರಾದಸಂಸ ಪ್ರತಿಭಟನೆ
ಪ್ರತಿಭಟನೆಯಲ್ಲಿ ಶ್ರೀಶೈಲ ಹೊಸಮನಿ, ಚನ್ನಪ್ಪ ಆನೆಗುಂದಿ, ರಾಜು ಅಣಬಿ, ಮಲ್ಲಿಕಾರ್ಜುನ ಪೂಜಾರಿ, ಖಾಲಿದ್ ಹಾಗೂ ಸಮಾನ ಮನಸ್ಕರ ವೇದಿಕೆಯ ಪದಾಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.





