ದಲಿತ ಸಮುದಾಯದ ಹಕ್ಕುಗಳು, ಸ್ವಾಭಿಮಾನ ಮತ್ತು ಸಾಮಾಜಿಕ ಸಮಾನತೆಯ ಪರವಾದ ಹೋರಾಟವನ್ನು ಸಂಘಟಿತಗೊಳಿಸುವ ಉದ್ದೇಶದಿಂದ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಸಮಿತಿಯು ಆಯೋಜಿಸಿರುವ ದಲಿತರ ಐಕ್ಯತಾ ಸಮಾವೇಶಕ್ಕೆ ಸಿದ್ಧತೆಗಳು ನಡೆಯುತ್ತಿದ್ದು, ಸಮಾವೇಶದ ಕರಪತ್ರಗಳನ್ನು ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಡುಗಡೆಗೊಳಿಸಿದರು.
ಕರಪತ್ರ ಬಿಡುಗಡೆಗೊಳಿಸಿದ ಬಳಿಕ ಮಾತನಾಡಿದ ಅವರು, ‘ಸಂವಿಧಾನ ಪ್ರತಿಪಾದಿಸಿರುವ ಸಮಾನತೆ, ಸಹೋದರತೆ ಮತ್ತು ಸಾಮಾಜಿಕ ನ್ಯಾಯದ ತತ್ವಗಳು ಸಮಾಜದ ಪ್ರತಿಯೊಬ್ಬರಿಗೂ ತಲುಪಬೇಕು. ದಲಿತ ಸಮುದಾಯದ ಜನರು ಒಗ್ಗಟ್ಟಿನಿಂದ ಮುನ್ನಡೆಯುವ ಮೂಲಕ ತಮ್ಮ ಹಕ್ಕುಗಳ ರಕ್ಷಣೆ ಹಾಗೂ ಸ್ವಾಭಿಮಾನದ ಬದುಕಿಗಾಗಿ ಸಂಘಟಿತ ಪ್ರಯತ್ನ ನಡೆಸುವುದು ಅಗತ್ಯವಾಗಿದೆ’ ಎಂದು ತಿಳಿಸಿದರು.
‘ಸಮುದಾಯದೊಳಗೆ ಜಾಗೃತಿ ಮೂಡಿಸುವುದು, ಸಾಮಾಜಿಕ ಅಸಮಾನತೆಗಳ ವಿರುದ್ಧ ಧ್ವನಿ ಎತ್ತುವುದು ಹಾಗೂ ಸಂವಿಧಾನಾತ್ಮಕ ಮೌಲ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಐಕ್ಯತಾ ಸಮಾವೇಶ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ದಲಿತ ಸಮುದಾಯದ ಮುಖಂಡರು, ಸಂಘಟನೆಯ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾವೇಶವನ್ನು ಯಶಸ್ವಿಗೊಳಿಸಬೇಕು’ ಎಂದು ಕರೆ ನೀಡಿದರು.
ಇದನ್ನು ಓದಿದ್ದೀರಾ? ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ
ಈ ಸಂದರ್ಭದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಜುಮ್ಮಣ್ಣ ಗುಡಿಮನಿ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.






