ಶಹಾಪುರ ತಾಲೂಕಿನ ಯಾದಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೀರೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ 50ಕ್ಕೂ ಹೆಚ್ಚು ಗ್ರಾಮಸ್ಥರು ವಾಂತಿ-ಭೇದಿಯಿಂದ ಬಳಲುತ್ತಿರುವ ಘಟನೆ ಬೆಳಕಿಗೆ ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳನ್ನು ಕರ್ತವ್ಯಲೋಪದಡಿ ಅಮಾನತುಗೊಳಿಸಬೇಕು ಎಂದು ಸಮತಾ ಸೈನಿಕ ದಳ ಜಿಲ್ಲಾ ಅಧ್ಯಕ್ಷ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಮುಖಂಡ ಹತ್ತಿಗೂಡೂರು ಶರಣರೆಡ್ಡಿ ಆಗ್ರಹಿಸಿದ್ದಾರೆ.
‘ಕಳೆದ ನಾಲ್ಕು ದಿನಗಳಿಂದ ಗ್ರಾಮದ ಮಹಿಳೆಯರು, ಪುರುಷರು, ಯುವಕರು ಹಾಗೂ ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಮಂದಿಯಲ್ಲಿ ವಾಂತಿ-ಭೇದಿ ಲಕ್ಷಣಗಳು ಕಾಣಿಸಿಕೊಂಡಿವೆ. ಗ್ರಾಮದ ಬೋರ್‌ವೆಲ್ ನೀರು ಕೆಟ್ಟುಹೋಗಿದ್ದರಿಂದ ಅನಿವಾರ್ಯವಾಗಿ ಗ್ರಾಮಸ್ಥರು ಹಾಳು ಬಾವಿಯ ಕಲುಷಿತ ನೀರನ್ನು ಬಳಸಿದ್ದು, ಇದರಿಂದ ಆರೋಗ್ಯ ಸಮಸ್ಯೆ ಉಂಟಾಗಿದೆ’ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಘಟನೆ ಸಂಭವಿಸಿ ಹಲವು ದಿನಗಳಾದ ಬಳಿಕ ತಾಲೂಕು ಆರೋಗ್ಯಾಧಿಕಾರಿ ಡಾ. ರಮೇಶ್ ಗುತ್ತೇದ ಅವರು ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದು, ಇದರಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಸ್ವಸ್ಥರಾದ ಹಲವರು ಸಮೀಪದ ಹತ್ತೀಗೂಡೂರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.
‘ಗ್ರಾಮದಲ್ಲಿ ಜೆಜೆಎಂ (ಜಲ್ ಜೀವನ್ ಮಿಷನ್) ಕಾಮಗಾರಿ ಕಳಪೆಯಾಗಿದ್ದು, ಇದೇ ಸಮಸ್ಯೆಗೆ ಮೂಲ ಕಾರಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಆಡಳಿತಾಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ತೋರಿದ್ದಾರೆ’ ಎಂದು ದೂರಿದ್ದಾರೆ.
ಈ ಕುರಿತು ಮಾತನಾಡಿದ ಗ್ರಾಮ ಮುಖಂಡರಾದ ಮೌನೇಶ್ ಬೀರೂರು ಹಾಗೂ ರವಿಕುಮಾರ ದಂಡಂಬಳಿ, “ಗ್ರಾಮದಲ್ಲಿ ನಾಲ್ಕು ದಿನಗಳಿಂದ ಜನರು ವಾಂತಿ-ಭೇದಿಯಿಂದ ಬಳಲುತ್ತಿದ್ದರೂ ಆರೋಗ್ಯ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಮರ್ಪಕ ಕ್ರಮ ಕೈಗೊಂಡಿಲ್ಲ. ಇದು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ” ಎಂದು ಆರೋಪಿಸಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ
ಘಟನೆಗೆ ಸಂಬಂಧಿಸಿದಂತೆ ತಾಲೂಕು ಆರೋಗ್ಯಾಧಿಕಾರಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಆಡಳಿತಾಧಿಕಾರಿ ಮತ್ತು ಸಂಬಂಧಪಟ್ಟ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಕರ್ತವ್ಯಲೋಪದಡಿ ಅಮಾನತುಗೊಳಿಸಬೇಕು ಎಂದು ಹತ್ತೀಗೂಡೂರು ಶರಣರೆಡ್ಡಿ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.




