ರಾಯಚೂರು ಜಿಲ್ಲೆಯಲ್ಲಿ ದಲಿತ ಸಮುದಾಯದ ಯುವಕರು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಕೊಲೆ, ಅತ್ಯಾಚಾರ, ಜಾತಿ ನಿಂದನೆ ಮತ್ತು ದೌರ್ಜನ್ಯ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ತಪ್ಪಿತಸ್ಥ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟ (ಸಮನ್ವಯ) ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸೋಮವಾರ ಶಹಾಪುರ ತಹಸೀಲ್ದಾರ್ ಕಚೇರಿ ಎದುರುಗಡೆ ಬೃಹತ್ ಪ್ರತಿಭಟನೆ ನಡೆಸಿದ ಮುಖಂಡರು, ತಹಸೀಲ್ದಾರ್ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಬಳಿಕ ಪ್ರತಿಭಟನಾಕಾರರು ಮಾತನಾಡಿ, “ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಭೂಮಾನಂದ ಅವರ ಹಾಡಹಗಲೇ ನಡೆದ ಕೊಲೆ, ಶಿರವಾರ ತಾಲೂಕಿನ ವಕ್ರಾಣಿ ಗ್ರಾಮದ ಅಶ್ವಿನಿ ಛಲವಾದಿ ಅವರ ಅತ್ಯಾಚಾರ ಹಾಗೂ ಕೊಲೆ ಮತ್ತು ಅಂಗಸುಗೂರು ತಾಲೂಕಿನ ಕರಡಕಲ್ ಗ್ರಾಮದ ರಾಮ್ಯ ಅವರ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ಅತ್ಯಂತ ಖಂಡನೀಯವಾಗಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ದಲಿತ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯುವಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ವಿಫಲವಾಗಿರುವುದರಿಂದ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ಪ್ರಕರಣಗಳ ತನಿಖೆಯನ್ನು ನಿಷ್ಪಕ್ಷಪಾತವಾಗಿ ಹಾಗೂ ತ್ವರಿತವಾಗಿ ನಡೆಸಿ, ಆರೋಪಿಗಳು ಯಾವುದೇ ರಾಜಕೀಯ ಪ್ರಭಾವ ಅಥವಾ ಅಧಿಕಾರದ ದುರುಪಯೋಗದಿಂದ ಕಾನೂನಿನಿಂದ ತಪ್ಪಿಸಿಕೊಳ್ಳದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ದೌರ್ಜನ್ಯಕ್ಕೊಳಗಾದ ಕುಟುಂಬಗಳಿಗೆ ಸರ್ಕಾರದಿಂದ ತಕ್ಷಣ ಸೂಕ್ತ ಪರಿಹಾರ, ಅಗತ್ಯ ನೆರವು ಹಾಗೂ ಕಾನೂನು ಸಹಾಯ ಒದಗಿಸಬೇಕು. ಜಾತಿ ತಾರತಮ್ಯ, ಅಸ್ಪೃಶ್ಯತೆ, ಜಾತಿ ನಿಂದನೆ ಮತ್ತು ದೌರ್ಜನ್ಯಗಳ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿವಿಧ ಮಾಧ್ಯಮಗಳ ಮೂಲಕ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು” ಎಂದು ಒತ್ತಾಯಿಸಿದರು.
“ರಾಯಚೂರು ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ, ತಪ್ಪು ಸಾಬೀತಾದಲ್ಲಿ ಕಾನೂನುಬದ್ಧ ಹಾಗೂ ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡುವ ಕುರಿತು ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
“ಹದ್ದಿನಾಳ ಗ್ರಾಮದ ಭೂಮಾನಂದ ಅವರ ಕೊಲೆ ಹಾಗೂ ಅಶ್ವಿನಿ ಛಲವಾದಿ ಮತ್ತು ರಾಮ್ಯ ಅವರ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳ ಆರೋಪಿಗಳಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಒತ್ತಾಯಿಸಿದರು.
ಇದನ್ನು ಓದಿದ್ದೀರಾ? ಯಾದಗಿರಿ | ನಮ್ಮ ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು: ಭೀಮಾಶಂಕರ ಎಂ
ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಚಂದ್ರು ಚಕ್ರವರ್ತಿ, ಜಿಲ್ಲಾ ಸಂಚಾಲಕ ಮೋಹನರಾಗೌಡ ಕನ್ಯಾಕೊಳ್ಳೂರ, ರಾಜ್ಯ ಸಂಚಾಲಕ ಎಂ. ಮಹಾದೇವ ದಿಗ್ಗಿ, ಯಾದಗಿರಿ ಜಿಲ್ಲಾ ಅಧ್ಯಕ್ಷ ಶರಣು ತಂಗಡಿಗಿ, ಜಿಲ್ಲಾ ಸಂಯೋಜಕ ರಾಯಪ್ಪ ಸಾಲಿಮನಿ, ಚಂದ್ರಶೇಖರ ಹತ್ತಿಗೂಡೂರು, ಹಣಮಂತ ಗೊಬ್ಬುರ, ಡಾ. ಮರೆಪ್ಪ ಪರಮೇಶ್ವರ, ಲಕ್ಷ್ಮಣ ಹಳಿಸಗರ ಸೇರಿದಂತೆ ದಲಿತ ಸಮುದಾಯದ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಿದ್ದರು.




