ಮುಂಗಾರು ವೈಫಲ್ಯದಿಂದ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಆಗ್ರಹಿಸಿದೆ.
ಗುರುವಾರ ಸುರಪುರ ಪ್ರವಾಸಿ ಮಂದಿರದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರಿಗೆ ಮನವಿ ಸಲ್ಲಿಸಿದ ಸಂಘದ ಪದಾಧಿಕಾರಿಗಳು, ಕಳೆದ ಮೂರು-ನಾಲ್ಕು ವರ್ಷಗಳಿಂದ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ರೈತರು ನಿರಂತರ ನಷ್ಟ ಅನುಭವಿಸುತ್ತಿದ್ದು, ಈ ಬಾರಿಯೂ ಸಮರ್ಪಕ ಮಳೆಯ ಕೊರತೆಯಿಂದ ಬಿತ್ತನೆಯಾದ ಬೆಳೆಗಳು ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಹತ್ತಿಗೂಡೂರಿನಿಂದ ಲಿಂಗಸೂಗೂರುವರೆಗೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಕಿರಿದಾಗಿರುವುದರಿಂದ ಪದೇಪದೇ ಅಪಘಾತಗಳು ಸಂಭವಿಸುತ್ತಿವೆ. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ರಸ್ತೆಯನ್ನು ತುರ್ತಾಗಿ ಅಗಲೀಕರಣಗೊಳಿಸಿ ಅಭಿವೃದ್ಧಿಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆ ಹಾಗೂ ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆ ತೀವ್ರವಾಗಿದ್ದು, ಗ್ರಾಮ ಪಂಚಾಯಿತಿಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಲಾಗಿದೆ.
ಪ್ರಧಾನಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ ಮನೆ ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಕಳೆದ ಒಂದು ವರ್ಷದಿಂದ ಬಾಕಿ ಬಿಲ್ ಪಾವತಿಯಾಗಿಲ್ಲ. ತಾಂತ್ರಿಕ ಸಮಸ್ಯೆಗಳ ನೆಪವಿಲ್ಲದೆ ತಕ್ಷಣವೇ ಬಾಕಿ ಹಣ ಬಿಡುಗಡೆ ಮಾಡಿ ಫಲಾನುಭವಿಗಳಿಗೆ ನ್ಯಾಯ ಒದಗಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಯಾದಗಿರಿ ಜಿಲ್ಲೆಯ ಸುರಪುರ ಮತ್ತು ಹುಣಸಗಿ ತಾಲೂಕುಗಳಿಗೆ ಒಂದೇ ಡಿಸಿಸಿ ಬ್ಯಾಂಕ್ ಶಾಖೆ ಕಾರ್ಯನಿರ್ವಹಿಸುತ್ತಿರುವುದರಿಂದ ರೈತರು ಬ್ಯಾಂಕಿಂಗ್ ಸೇವೆಗಾಗಿ ಹಲವು ದಿನ ಕಾಯುವ ಸ್ಥಿತಿ ಎದುರಿಸುತ್ತಿದ್ದಾರೆ. ಆದ್ದರಿಂದ ಹುಣಸಗಿ, ಕೊಡೇಕಲ್, ನಾರಾಯಣಪುರ, ಕಕ್ಕೇರಾ ಹಾಗೂ ಕೆಂಭಾವಿಯಲ್ಲಿ ಹೊಸ ಡಿಸಿಸಿ ಬ್ಯಾಂಕ್ ಶಾಖೆಗಳನ್ನು ಆರಂಭಿಸಿ ರೈತರಿಗೆ ಸುಲಭ ಸೇವೆ ಕಲ್ಪಿಸಬೇಕು ಎಂದು ಸಂಘ ಒತ್ತಾಯಿಸಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ಗಾಂಜಾ ಸೇವನೆ ಆರೋಪ: ಆಟೋ ಚಾಲಕನ ಬಂಧನ
ಮನವಿಗೆ ಜಿಲ್ಲಾ ಅಧ್ಯಕ್ಷ ಅಯ್ಯಣ್ಣ ಹಾಲಭಾವಿ, ತಾಲೂಕು ಅಧ್ಯಕ್ಷ ಹಣಮಂತ್ರಾಯ ಚಂದಲಾಪೂರ, ಜಿಲ್ಲಾ ಉಪಾಧ್ಯಕ್ಷ ತಿಪ್ಪಣ್ಣ ಜಂಪಾ, ತಾಲೂಕು ಕಾರ್ಯದರ್ಶಿ ವೆಂಕಟೇಶಗೌಡ ಕುಪಗಲ್, ಹನುಮಗೌಡ ನಾರಾಯಣಪುರ ಸೇರಿದಂತೆ ಸಂಘದ ಹಲವು ಪದಾಧಿಕಾರಿಗಳು ಹಾಗೂ ರೈತ ಮುಖಂಡರು ಸಹಿ ಹಾಕಿದ್ದರು.




