ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ ಸಮುದಾಯದ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ನೀಡುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ವತಿಯಿಂದ ನಗರದ ಬಸವೇಶ್ವರ ವೃತ್ತದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಎಸ್‌ಡಿಪಿಐ ಶಹಾಪುರ ತಾಲೂಕು ಅಧ್ಯಕ್ಷ ಮುನೀರ್ ಬಾಗವಾನ್, ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ನಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು 2026-27ನೇ ಸಾಲಿನಲ್ಲಿಯೇ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸುವವರೆಗೂ ಧರಣಿ ನಿರಂತರವಾಗಿ ಮುಂದುವರಿಯಲಿದೆ. ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಇಲ್ಲದ ಕಾರಣ ತಾಂತ್ರಿಕ ಶಿಕ್ಷಣ ಪಡೆಯಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಯಾದಗಿರಿ ಸೇರಿದಂತೆ ದೂರದ ಪ್ರದೇಶಗಳಿಗೆ ತೆರಳಬೇಕಾದ ಅನಿವಾರ್ಯತೆ ಇದೆ. ಇದರಿಂದ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತ ಸಮುದಾಯದ ಹೆಣ್ಣುಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಪ್ರತ್ಯೇಕ ಸರ್ಕಾರಿ ಪಿಯು ಕಾಲೇಜು ಸ್ಥಾಪಿಸಿ, ಸ್ವಂತ ಕಟ್ಟಡ ನಿರ್ಮಾಣಕ್ಕೆ ಅನುದಾನ ಹಾಗೂ ಆಡಳಿತಾತ್ಮಕ ಅನುಮೋದನೆ ನೀಡಬೇಕು. ಎರಡೂ ಬೇಡಿಕೆಗಳನ್ನು ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಿ, 2026-27ನೇ ಸಾಲಿನಲ್ಲಿಯೇ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಬಂಡೋಳ್ಳಿಯಲ್ಲಿ ವಾಲ್ಮೀಕಿ ಶಾಖಾ ಮಠಕ್ಕೆ ಅಡಿಗಲ್ಲು; ಶಿಕ್ಷಣಕ್ಕೆ ₹25 ಕೋಟಿ ಅನುದಾನ
ಶಹಾಪುರ ತಾಲೂಕಿನ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಹೆಣ್ಣುಮಕ್ಕಳ ಉನ್ನತ ಶಿಕ್ಷಣದ ಹಿತದೃಷ್ಟಿಯಿಂದ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಒತ್ತಾಯಿಸಿದೆ.





