ಸುರಪುರ ತಾಲೂಕಿನ ಶಖಾಪೂರ ಎಸ್.ಎಚ್. ಗ್ರಾಮದಲ್ಲಿ ದಲಿತರ ಮೇಲೆ ನಡೆದಿರುವುದಾಗಿ ಆರೋಪಿಸಲಾಗಿರುವ ಸರಣಿ ಹಲ್ಲೆ, ಸಾಮಾಜಿಕ ಬಹಿಷ್ಕಾರ ಹಾಗೂ ಶವ ಸಂಸ್ಕಾರಕ್ಕೆ ಸಂಬಂಧಿಸಿದ ವಿವಾದದ ಕುರಿತು ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ರಾಜ್ಯ ಸಮಿತಿ ಮನವಿ ಸಲ್ಲಿಸಿದೆ.
ರಾಜ್ಯ ಸಂಚಾಲಕ ಅರ್ಜುನ್ ಭದ್ರೆ ಹಾಗೂ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ನೇತೃತ್ವದಲ್ಲಿ ಗೃಹ ಸಚಿವ ಪ್ರಿಯಾಂಕ್ ಎಂ. ಖರ್ಗೆ ಹಾಗೂ ಯಾದಗಿರಿ ಜಿಲ್ಲಾಧಿಕಾರಿಗಳಿಗೆ, ಸುರಪುರ ಡಿವೈಎಸ್‌ಪಿ ಮತ್ತು ತಹಸೀಲ್ದಾರ್ ಮುಖಾಂತರ ಮನವಿ ಸಲ್ಲಿಸಲಾಯಿತು.
ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು ‘ಶಖಾಪೂರ ಗ್ರಾಮದಲ್ಲಿ ಶವ ಸಂಸ್ಕಾರಕ್ಕಾಗಿ ಕುಣಿ ತೋಡಲು ನಿರಾಕರಿಸಿದ ಕಾರಣ ದಲಿತರ ಮೇಲೆ ಕಳೆದ ಒಂದು ತಿಂಗಳಿನಿಂದ ನಿರಂತರ ಹಲ್ಲೆಗಳು ನಡೆಯುತ್ತಿವೆ ಎಂದು ಆರೋಪಿಸಲಾಗಿದೆ. ಇದೇ ವೇಳೆ ಮೇಲ್ವರ್ಗದ ಯುವತಿಯೊಬ್ಬಳ ಆತ್ಮಹತ್ಯೆ ಪ್ರಕರಣವನ್ನು ಪೊಲೀಸ್ ಇಲಾಖೆಗೆ ತಿಳಿಸದೆ ಮಣ್ಣು ಮಾಡಲಾಗಿದೆ ಎಂಬ ಆರೋಪವನ್ನೂ ಮಾಡಿದ್ದು, ಈ ಪ್ರಕರಣದ ಬಗ್ಗೆಯೂ ಸಮಗ್ರ ತನಿಖೆ ನಡೆಸುವಂತೆ’ ಒತ್ತಾಯಿಸಿದರು
‘ದಿನಾಂಕ 1 ಆಗಸ್ಟ್ 2026ರಂದು ದಲಿತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ 17 ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಆತ್ಮಹತ್ಯೆ ಪ್ರಕರಣ ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದನ್ನು ವೈಜ್ಞಾನಿಕ ತನಿಖೆ ಮೂಲಕ ಬಹಿರಂಗ ಪಡಿಸಬೇಕು’ ಎಂದು ಸಮಿತಿ ಆಗ್ರಹಿಸಿದೆ.
‘ಇದೇ ವೇಳೆ ಹಲ್ಲೆಗೊಳಗಾದ ದಲಿತ ಕುಟುಂಬಗಳಿಗೆ ಸೂಕ್ತ ಪರಿಹಾರ, ಪೊಲೀಸ್ ರಕ್ಷಣೆ, ಕುಡಿಯುವ ನೀರಿನ ವ್ಯವಸ್ಥೆ, ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ, ಪ್ರತ್ಯೇಕ ಅಂಗನವಾಡಿ ಕೇಂದ್ರ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೂಲಕ ಸಾಲ ಸೌಲಭ್ಯ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಒತ್ತಾಯಿಸಿದರು.
ಬೇಡಿಕೆಗಳ ಕುರಿತು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಸುರಪುರ ಬಂದ್ ಸೇರಿದಂತೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಎಚ್ಚರಿಕೆ ನೀಡಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಕೆಮಿಕಲ್ ಸೋರಿಕೆ ದುರಂತ: ಕಂಪನಿ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಡಾ. ಶರಣಪ್ರಕಾಶ ಪಾಟೀಲ ಸೂಚನೆ
ಈ ಸಂದರ್ಭದಲ್ಲಿ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಸೇರಿದಂತೆ ಕುಟುಂಬಸ್ಥರು ಭಾಗವಹಸಲ್ಲಿಸಿದರು.




