‘ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಹಕ್ಕು, ಗೌರವ ಮತ್ತು ಸ್ವಾತಂತ್ರ್ಯ ನೀಡಿದ್ದು, ಜಾತಿ, ಧರ್ಮ ಹಾಗೂ ವರ್ಗದ ಆಧಾರದ ಮೇಲೆ ತಾರತಮ್ಯ ಮಾಡದೆ ಸಮಾನತೆಯ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ಭೀಮಜ್ಯೋತಿ ಗ್ರಾಮೀಣ ಅಭಿವೃದ್ಧಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಭೀಮಾಶಂಕರ ಎಂ. ಯರಗೋಳ ಹೇಳಿದರು.
ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಹಾಗೂ ತಾಲೂಕು ಸಮಾಜ ಕಲ್ಯಾಣ ಇಲಾಖೆ ಮತ್ತು ಭೀಮಜ್ಯೋತಿ ಗ್ರಾಮೀಣ ಅಭಿವೃದ್ಧಿ ಶಿಕ್ಷಣ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಅಸ್ಪೃಶ್ಯತೆ ನಿವಾರಣೆ ಕುರಿತ ವಿಚಾರಗೋಷ್ಠಿ ಹಾಗೂ ಬೀದಿ ನಾಟಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಅಸ್ಪೃಶ್ಯತೆ ನಿವಾರಣೆ ಕೇವಲ ಕಾನೂನಿನಿಂದ ಸಾಧ್ಯವಿಲ್ಲ. ಜನರಲ್ಲಿ ಶಿಕ್ಷಣ, ಸಾಮಾಜಿಕ ಅರಿವು ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಮೂಲಕ ಮಾತ್ರ ಈ ಅನಿಷ್ಟ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ವಿಚಾರಗೋಷ್ಠಿ ಹಾಗೂ ಬೀದಿ ನಾಟಕಗಳ ಮೂಲಕ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ’ ಎಂದರು.
‘ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯನ್ನು ತೊಡೆದುಹಾಕಿ ಸಮಾನತೆ, ಸಹೋದರತ್ವ ಹಾಗೂ ಪರಸ್ಪರ ಗೌರವದ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು’ ಎಂದು ಕರೆ ನೀಡಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!
ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ನಿಂಗಪ್ಪ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಭೀಮಜ್ಯೋತಿ ಕಲಾತಂಡದವರು ಅಸ್ಪೃಶ್ಯತೆ ನಿವಾರಣೆ ಕುರಿತು ಜಾಗೃತಿ ಗೀತೆಗಳನ್ನು ಹಾಡಿ, ಬೀದಿ ನಾಟಕ ಪ್ರದರ್ಶಿಸುವ ಮೂಲಕ ಗ್ರಾಮಸ್ಥರಲ್ಲಿ ಅರಿವು ಮೂಡಿಸಿದರು. ಕಲಾತಂಡದ ಕಲಾವಿದರು, ಗ್ರಾಮಸ್ಥರು, ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.




