ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಕೊರಬಾ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹೇರಲಾಗಿದ್ದು, ಜೀವ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ದೂರು ಸಲ್ಲಿಸಲಾಗಿದೆ.
ಗ್ರಾಮದಲ್ಲಿ ಹಂದಿ ಸಾಕಾಣಿಕೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಉಂಟಾಗಿದ್ದು, ಈ ವೇಳೆ ಅನ್ಯ ಜಾತಿಯ ಕೆಲವರು ಜಾತಿನಿಂದನೆ ಮಾಡಿ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಮರೆಮ್ಮ ಮಾರೆಪ್ಪ ದೂರಿನಲ್ಲಿ ಆರೋಪಿಸಿದ್ದಾರೆ.
ತಮ್ಮ ಪತಿ ಮಾರೆಪ್ಪ ಅವರ ಮೇಲೂ ಹಲ್ಲೆ ನಡೆಸಲಾಗಿದೆ. ಘಟನೆ ಕುರಿತು ದೂರು ನೀಡಲು ಸೈದಾಪುರ ಪೊಲೀಸ್ ಠಾಣೆಗೆ ತೆರಳಿದಾಗ ಪೊಲೀಸರು ದೂರು ಸ್ವೀಕರಿಸಿಲ್ಲ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಶಿಕ್ಷಕನಿಗೆ 25 ವರ್ಷ ಜೈಲು
ಹಲ್ಲೆ ನಡೆಸಿದವರು ಕುಟುಂಬವನ್ನು ಗ್ರಾಮದಿಂದ ಹೊರಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಕುಟುಂಬದವರು ಆತಂಕದಲ್ಲಿದ್ದು, ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು ಎಂದು ಮರೆಮ್ಮ ಮಾರೆಪ್ಪ ಮನವಿ ಮಾಡಿದ್ದಾರೆ.




