ನೀಟ್ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ದೆಹಲಿಯಲ್ಲಿ ನಡೆಯುತ್ತಿರುವ ‘ಪಾರ್ಲಿಮೆಂಟ್ ಚಲೋ’ ಹೋರಾಟಕ್ಕೆ ಬೆಂಬಲ ಸೂಚಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ) ಜಿಲ್ಲಾ ಸಮಿತಿ ವತಿಯಿಂದ ಸೋಮವಾರ ನಗರದ ನೇತಾಜಿ ಸುಭಾಷ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ ಕೆ ಮಾತನಾಡಿ, ‘ನೀಟ್ ಸೇರಿದಂತೆ ರಾಷ್ಟ್ರೀಯ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಆರೋಪಿಸಿದರು. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಹೊಸ ದೆಹಲಿಯಲ್ಲಿ ಶಾಂತಿಯುತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಹಾಗೂ ಇತರ ಹೋರಾಟಗಾರರನ್ನು ಪೊಲೀಸರು ಬಂಧಿಸಿರುವ ಕ್ರಮವನ್ನು ತೀವ್ರವಾಗಿ’ ಖಂಡಿಸಿದರು.
‘ಸೋನಂ ವಾಂಗ್ಚುಕ್ ಅವರ ಉಪವಾಸ ಸತ್ಯಾಗ್ರಹ 22ನೇ ದಿನಕ್ಕೆ ಕಾಲಿಟ್ಟಿದ್ದು, ಆರೋಗ್ಯ ಹದಗೆಟ್ಟಿದ್ದರೂ ಕೇಂದ್ರ ಸರ್ಕಾರ ಯಾವುದೇ ಪ್ರಜಾತಾಂತ್ರಿಕ ಸಂವಾದ ನಡೆಸದೆ ದಮನಕಾರಿ ಧೋರಣೆ ಅನುಸರಿಸುತ್ತಿದೆ’ ಎಂದು ಅವರು ಆರೋಪಿಸಿದರು.
‘ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ತುಳಜಾರಾಮ್ ಮಾತನಾಡಿ, ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳು ಶಿಕ್ಷಣ ವ್ಯವಸ್ಥೆಯ ವೈಫಲ್ಯವಲ್ಲ, ಸಂಬಂಧಪಟ್ಟವರ ಬೇಜವಾಬ್ದಾರಿತನದ ಪರಿಣಾಮ ಎಂದು ಟೀಕಿಸಿದರು. ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸದೆ ಕೇಂದ್ರ ಸರ್ಕಾರ ಮೌನ ವಹಿಸಿರುವುದು ಖಂಡನೀಯ’ ಎಂದರು.
ಪ್ರತಿಭಟನಾಕಾರರು, ಸೋನಂ ವಾಂಗ್ಚುಕ್ ಹಾಗೂ ಇತರ ಸತ್ಯಾಗ್ರಹಿಗಳೊಂದಿಗೆ ಕೇಂದ್ರ ಸರ್ಕಾರ ಕೂಡಲೇ ಪ್ರಜಾಸತ್ತಾತ್ಮಕ ಮಾತುಕತೆ ಆರಂಭಿಸಬೇಕು ಹಾಗೂ ಪರೀಕ್ಷಾ ಅಕ್ರಮಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಸದಸ್ಯರಾದ ರಂಜಿತಾ ನಾಗರಾಜ್, ಶ್ರೀಶೈಲ್, ಭಾಗ್ಯಶ್ರೀ, ರೋಜಾ, ದೇವೀಂದ್ರಮ್ಮ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.





