“ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು. ಸ್ವತಂತ್ರ ಭಾರತದಲ್ಲಿ ಸಂವಿಧಾನವೇ ಅತ್ಯುನ್ನತ ಶಕ್ತಿಯಾಗಿದ್ದು, ಸಂವಿಧಾನದ ಆಶಯ ಹಾಗೂ ಸಾಮಾಜಿಕ ನ್ಯಾಯದ ಪರವಾಗಿ ನನ್ನ ಹೋರಾಟ ನಿರಂತರವಾಗಿರಲಿದೆ” ಎಂದು ಗೃಹ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಶುಕ್ರವಾರ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಿ, ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ಬುದ್ಧ, ಬಸವಣ್ಣ ಮತ್ತು ಅಂಬೇಡ್ಕರ್ ಅವರ ತತ್ವಗಳು ಸಮಾಜಕ್ಕೆ ಸಮಾನತೆ, ಸ್ವಾಭಿಮಾನ ಮತ್ತು ವೈಜ್ಞಾನಿಕ ಚಿಂತನೆಯ ಮಾರ್ಗವನ್ನು ತೋರಿಸಿವೆ. ಮಹನೀಯರ ಪ್ರತಿಮೆಗಳನ್ನು ಸ್ಥಾಪಿಸಿ ಗೌರವಿಸುವುದಷ್ಟೇ ನಮ್ಮ ಕರ್ತವ್ಯವಾಗಬಾರದು. ಅವರು ಸಾರಿದ ವಿಚಾರಧಾರೆಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಕೊಡುಗೆ ಅಪಾರವಾಗಿದ್ದು, ಸಂವಿಧಾನದ ಮೂಲಕ ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕು ಹಾಗೂ ಮತದಾನದ ಹಕ್ಕು ದೊರಕಿಸಿಕೊಟ್ಟ ಅವರ ದೂರದೃಷ್ಟಿಯನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು” ಎಂದರು.
“ಯುವಕರು ವಾಟ್ಸಪ್‌ನಲ್ಲಿ ಹರಿದಾಡುವ ಮಾಹಿತಿಯನ್ನೇ ನಂಬದೆ ಪುಸ್ತಕಗಳನ್ನು ಓದಬೇಕು. ಇತಿಹಾಸ ಮತ್ತು ಅಧಿಕೃತ ದಾಖಲೆಗಳನ್ನು ಅಧ್ಯಯನ ಮಾಡಿ ಮಾತನಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಹಾರ, ಶಾಲುಗಳ ಬದಲಿಗೆ ಪುಸ್ತಕಗಳನ್ನು ಉಡುಗೊರೆಯಾಗಿ ನೀಡುವಂತೆ ನಾನು ಮನವಿ ಮಾಡುತ್ತೇನೆ. ಓದುವ, ಪ್ರಶ್ನಿಸುವ ಹಾಗೂ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಸಂಸ್ಕೃತಿ ಬೆಳೆಸಬೇಕು. ವ್ಯಕ್ತಿಪೂಜೆಗಿಂತ ವಿಚಾರಗಳಿಗೆ ಆದ್ಯತೆ ನೀಡಬೇಕು” ಎಂದು ಕರೆ ನೀಡಿದರು.

“ದಲಿತರು ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೇರುವುದು ಮತ್ತು ಸಮಾಜದಲ್ಲಿ ಸಮಾನ ಅವಕಾಶಗಳನ್ನು ಪಡೆಯುವುದು ಇಂದಿಗೂ ಕೆಲವರಿಗೆ ಅಸಹನೀಯವಾಗಿದೆ. ಇಂತಹ ತಾರತಮ್ಯದ ಮನಸ್ಥಿತಿಗಳ ವಿರುದ್ಧ ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ನನ್ನ ಧ್ವನಿ ಸದಾ ಇರಲಿದೆ. ಜನರ ಆಶೀರ್ವಾದ ಇರುವವರೆಗೆ ಯಾವುದೇ ಸವಾಲಿಗೂ ಹೆದರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.
ಇದೇ ಸಂದರ್ಭದಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಅಗತ್ಯವಿರುವ ಕಡೆ ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸುವ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪನೆಗೆ ಸ್ಥಳ ದಾನ ಮಾಡಿದವರು ಸೇರಿದಂತೆ ಪುತ್ಥಳಿ ನಿರ್ಮಾಣಕ್ಕೆ ಸಹಕರಿಸಿದ 25 ಮಂದಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
ಇದನ್ನು ಓದಿದ್ದೀರಾ? ಕಲಬುರಗಿ | ನ.15ರಂದು ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ
“ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವುದು, ಸಾಮಾಜಿಕ ನ್ಯಾಯವನ್ನು ಬಲಪಡಿಸುವುದು ಹಾಗೂ ಸಮಾನತೆಯ ಸಮಾಜ ನಿರ್ಮಿಸುವುದೇ ನಮ್ಮ ಗುರಿಯಾಗಿದೆ” ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಪೂಜ್ಯ ಜ್ಞಾನಪ್ರಕಾಶ ಸ್ವಾಮೀಜಿ, ಯಾದಗಿರಿ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು, ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ, ನಿಗಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ್, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಶಂಕರ್ ಮಾವಳ್ಳಿ, ಜಿಲ್ಲಾ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ನೀಲಕಂಠ ಬಡಿಗೇರ್, ಭೀಮಣ್ಣ ಮೇಟಿ, ಮರೆಪ್ಪ ಚಟ್ಟೇಕರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.






