ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಸಂವಿಧಾನ ಸಂರಕ್ಷಣೆ ಸಮಿತಿ ವತಿಯಿಂದ ನವೆಂಬರ್ 26ರಂದು ವಡಗೇರಾ ಪಟ್ಟಣದ ಶಿವ ಬಾಲಾಜಿ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ ಹಾಗೂ ವಿಚಾರ ಸಂಕಿರಣ ಆಯೋಜಿಸಲಾಗಿದೆ.
ಈ ಕುರಿತು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾಧ್ಯಕ್ಷ ಭೀಮಣ್ಣ ಮೇಟಿ, ‘ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಇದಕ್ಕೂ ಮುನ್ನ ಪಟ್ಟಣದ ವಾಲ್ಮೀಕಿ ವೃತ್ತದಿಂದ ಕಲ್ಯಾಣ ಮಂಟಪದವರೆಗೆ ಮೆರವಣಿಗೆ ನಡೆಯಲಿದೆ. ಬಳಿಕ ಬೆಂಗಳೂರಿನ ಡಾ. ಶ್ರೀನಿವಾಸ ಅವರು ವಿಚಾರ ಸಂಕಿರಣದಲ್ಲಿ ಉಪನ್ಯಾಸ ನೀಡಲಿದ್ದಾರೆ’ ಎಂದು ತಿಳಿಸಿದರು.
‘ಸಂವಿಧಾನದ ಆಶಯಗಳನ್ನು ಕೇವಲ ಆಚರಣೆಗಳಿಗೆ ಸೀಮಿತಗೊಳಿಸದೆ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನ ನೀಡಿರುವ ಹಕ್ಕುಗಳ ಜತೆಗೆ ಕರ್ತವ್ಯಗಳ ಬಗ್ಗೆಯೂ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವುದು ಹಾಗೂ ಯುವಜನರಲ್ಲಿ ಸಂವಿಧಾನದ ಮಹತ್ವ ತಿಳಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಜಾನುವಾರು ಸಂತೆ ಜಾಗ ಒತ್ತುವರಿ ತೆರವಿಗೆ ಆಗ್ರಹ; ರೈತ ಸಂಘದಿಂದ ಪ್ರತಿಭಟನೆ
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಗಾಳೆಪ್ಪ ಪೂಜಾರಿ, ಭಾಶುಮಿಯ್ಯ ನಾಯ್ಯೋಡಿ, ಫಕೀರ ಅಹ್ಮದ್ ಮರಡಿ, ಸಂಗುಗೌಡ ಮಾಲಿಪಾಟೀಲ್, ಸಾಬಣ್ಣ ವರಿಕೇರಿ, ದೇವಪ್ಪ ಕಡೇಚೂರ, ಬಸನಗೌಡ ಜಡಿ, ಭೀಮಣ್ಣ ಬೂದಿನಾಳ, ಹೊನ್ನಪ್ಪ ದಾಳಿ, ಸೈಯದ್ ಅಲಿ, ಸತೀಶ ಜಡಿ, ಬಸವರಾಜ ಪಿಲ್ಲಿ ಹಾಗೂ ಕುಮಾರ್ ಎಸ್. ತೆಳಿಗೇರಿ ಉಪಸ್ಥಿತರಿದ್ದರು.





