ಶಹಾಪುರ ತಾಲೂಕಿನ ವಿವಿಧ ಗ್ರಾಮಗಳ ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಸಮತಾ ಸೈನಿಕ ದಳದ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮೂಲಕ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಮನವಿ ಸಲ್ಲಿಸಿದರು.
ಶಹಾಪುರ ತಾಲೂಕಿನ ಹತ್ತಿಗೂಡೂರು, ಕೊಂಗಂಡಿ, ಮಂಡಗಳ್ಳಿ, ಮಲಹರೋಜಾ, ವಡಗೇರಾ ಸೇರಿದಂತೆ ಒಂಬತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸುವಂತೆ ಹಲವು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಆದರೂ ಸರ್ಕಾರ ಮತ್ತು ಜಿಲ್ಲಾಡಳಿತ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ಹತ್ತಿಗೂಡೂರು ಶರಣರೆಡ್ಡಿ ಮಾತನಾಡಿ, “ಕಳೆದ ನಾಲ್ಕು ವರ್ಷಗಳಿಂದ ಭೂಮಿ ಮತ್ತು ನಿವೇಶನಕ್ಕಾಗಿ ನಿರಂತರ ಹೋರಾಟ ನಡೆಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬೇಡಿಕೆಗಳಿಗೆ ಸ್ಪಂದಿಸಿಲ್ಲ” ಎಂದು ಆರೋಪಿಸಿದರು.

ಸರ್ಕಾರ ಮತ್ತು ಜಿಲ್ಲಾಡಳಿತ ಕೂಡಲೇ ಮಧ್ಯಪ್ರವೇಶಿಸಿ ಭೂಹೀನ ದಲಿತ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು. ಅರ್ಹ ಕುಟುಂಬಗಳಿಗೆ ಭೂಮಿ ಹಾಗೂ ವಸತಿ ಸೌಲಭ್ಯ ಕಲ್ಪಿಸುವ ಮೂಲಕ ಅವರ ದೀರ್ಘಕಾಲದ ಸಮಸ್ಯೆಗೆ ಪರಿಹಾರ ನೀಡಬೇಕು. ಭೂಮಿ, ನಿವೇಶನ ಹಾಗೂ ವಸತಿ ಸೌಲಭ್ಯ ಮಂಜೂರು ಮಾಡದಿದ್ದರೆ ಈ ವಾರದಲ್ಲೇ ತಹಶೀಲ್ದಾರ್ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಎಚ್ಚರಿಸಿದರು.
ಇದನ್ನೂ ಓದಿ : ಯಾದಗಿರಿ | ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
ಈ ಸಂದರ್ಭದಲ್ಲಿ ಸಮತಾ ಸೈನಿಕ ದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈಶ್ವರ ರೋಜಾ, ಶರಣಪ್ಪ ಚಲವಾದಿ, ಮಾದೇವಪ್ಪ ಮಂಡಗಳ್ಳಿ, ಶಿವಮ್ಮ, ಮಹಾಲಕ್ಷ್ಮಿ, ಜೇಜಮ್ಮ, ಮಲ್ಲಮ್ಮ ಇಚಿಂತಿ, ಎಲ್ಲಮ್ಮ ಕೊಂಗಂಡಿ, ರೇಣುಕಾ ಮಂಡಗಳ್ಳಿ, ಗದಿಗೆಮ್ಮ ಪೂಜಾರಿ, ರೋಜಾ, ಮಲ್ಲಮ್ಮ ಮದರಕಲ್ಲು, ಸಿದ್ದಮ್ಮ, ನಿರ್ಮಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.





