ರಾಜ್ಯದ ನೂತನ ಸಚಿವ ಸಂಪುಟ ರಚನೆ ಸಂದರ್ಭದಲ್ಲಿ ಯಾದಗಿರಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೆಪಿಸಿಸಿ ಪದವೀಧರ ವಿಭಾಗದ ಯಾದಗಿರಿ ಜಿಲ್ಲಾ ಉಪಾಧ್ಯಕ್ಷ ಮರಿಲಿಂಗ ಸಾವೂರು ರಾಜ್ಯ ಕಾಂಗ್ರೆಸ್ ನಾಯಕತ್ವವನ್ನು ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರು ‘ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್, ಎಂಎಲ್ಸಿ ಸೇರಿದಂತೆ ವಿವಿಧ ಹಂತಗಳಲ್ಲಿ ಜನಸೇವೆ ಮಾಡಿ ಅಪಾರ ರಾಜಕೀಯ ಅನುಭವ ಹೊಂದಿದ್ದಾರೆ’ ಎಂದು ತಿಳಿಸಿದ್ದಾರೆ.
‘ಪಕ್ಷ ಸಂಘಟನೆ ಬಲಪಡಿಸುವಲ್ಲಿ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಅವರು ಸದಾ ಮುಂಚೂಣಿಯಲ್ಲಿದ್ದು, ಯಾದಗಿರಿ ಜಿಲ್ಲೆಯ ಅಭಿವೃದ್ಧಿ, ರೈತರ ಸಮಸ್ಯೆಗಳು, ಯುವಕರ ಉದ್ಯೋಗ ಹಾಗೂ ಸಾಮಾಜಿಕ ನ್ಯಾಯದ ಪರ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ’ ಎಂದು ಹೇಳಿದರು.
‘ಈ ಬಾರಿ ರಾಜ್ಯ ಸಚಿವ ಸಂಪುಟದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ನೀಡಿ ಸಚಿವರನ್ನಾಗಿ ನೇಮಕ ಮಾಡಿದರೆ ಯಾದಗಿರಿ ಜಿಲ್ಲೆಯ ಜನತೆಗೆ ನ್ಯಾಯ ಸಿಗುವುದರ ಜೊತೆಗೆ ಕಾಂಗ್ರೆಸ್ ಪಕ್ಷಕ್ಕೂ ಮತ್ತಷ್ಟು ಬಲ ಸಿಗಲಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದನ್ನು ಓದಿದ್ದೀರಾ? ಯಾದಗಿರಿ | ಪ್ರಿಯಾಂಕ್ ಖರ್ಗೆಗೆ ಡಿಸಿಎಂ ಸ್ಥಾನ ನೀಡಲು ಒತ್ತಾಯ
‘ಆದ್ದರಿಂದ ರಾಜ್ಯದ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಅವರು ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆಯ ಜನರ ಆಶಯವನ್ನು ಈಡೇರಿಸಬೇಕು’ ಎಂದು ಅವರು ಮನವಿ ಮಾಡಿದರು.




