ಜಮೀನಿಗೆ ಸಂಪರ್ಕ ಕಲ್ಪಿಸುವ ದಾರಿಯ ವಿಚಾರವಾಗಿ ನಡೆದ ಕುಟುಂಬದೊಳಗಿನ ಗಲಾಟೆ ಯುವಕನೊಬ್ಬನ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮೃತರನ್ನು ಪರಮೇಶಿ (27), ತಂದೆ ಮಲ್ಲಣ್ಣ ಗಿಂಡಿ ಎಂದು ಗುರುತಿಸಲಾಗಿದೆ.
ಜಮೀನಿನ ದಾರಿ ವಿಚಾರವಾಗಿ ಕುಟುಂಬದೊಳಗೆ ಉಂಟಾಗಿದ್ದ ವೈಷಮ್ಯವು ತೀವ್ರಗೊಂಡು ಕೊಲೆ ಮಟ್ಟಕ್ಕೆ ತಲುಪಿದೆ ಎಂದು ತಿಳಿದುಬಂದಿದೆ. ಆರೋಪಿಗಳು ಮಾರಕಾಸ್ತ್ರಗಳಿಂದ ಪರಮೇಶಿ ಮೇಲೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ವೇಳೆ ಮೃತನ ತಮ್ಮನಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆ ಕೆಂಭಾವಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ.
ಇದನ್ನು ಓದಿದ್ದೀರಾ? ಯಾದಗಿರಿ | ಕೃಷಿ ಹೊಂಡದಲ್ಲಿ ಮುಳುಗಿ ನಾಲ್ಕು ಮಕ್ಕಳ ದುರ್ಮರಣ
ಘಟನೆ ಹಿನ್ನೆಲೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದಾರೆ.




