ರಸ್ತೆ ಬದಿ ನಿಂತಿದ್ದ ರಾರಿಗೆ ಕೆಎಸ್‌ಆರ್‌ಟಿಸಿ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಬಸ್‌ನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ.
ಯಲ್ಲಾಪುರದ ಮಾವಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ರಸ್ತೆಯಲ್ಲಿ ತೆರಳುತ್ತಿದ್ದ ವಾಹನವನ್ನು ಓವರ್‌ಟೇಕ್ ಮಾಡಲು ಹೋಗಿ, ರಸ್ತೆ ಬದಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಏಳು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗುಳೆದಗುಡ್ಡ ಗ್ರಾಮದ ನಿಲವ್ವ ಹರದೊಳ್ಳಿ (40), ಜಾಲಿಹಾಳ ಗ್ರಾಮದ ಗಿರಿಜವ್ವಾ ಬೂದನ್ನವರ (30) ಹಾಗೂ ಸುಮಾರು 45 ವರ್ಷದ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.
ಬಸ್ ಚಾಲಕ ಯಮನಪ್ಪ ಮಾಗಿ ಅವರ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಗಲಕೋಟೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮಾವಳ್ಳಿ ಕ್ರಾಸ್ ಬಳಿ ಓವರ್‌ಟೇಕ್ ಮಾಡುವಾಗ ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಲಾರಿಯ ಇಂಡಿಕೇಟರ್ ಹಾಕದೆ, ನಿಲ್ಲಿಸಿದ್ದ. ಕತ್ತಲೆ ಇದ್ದ ಕಾರಣ, ಲಾರಿ ಇರುವುದು ಸ್ಪಷ್ಟವಾಗಿ ಗೋಚರಿಸದೇ ಇರುವುದು ಅಪಘಾತಕ್ಕೆ ಕಾರಣವೆಂದು ಹೇಳಲಾಗಿದೆ.