ಯಲ್ಲಾಪುರ: ಪಟ್ಟಣದ ರವೀಂದ್ರ ನಗರದಲ್ಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಬಾರದು ಎಂದು ಆಗ್ರಹಿಸಿ ಸ್ಥಳೀಯರು ಕೇಂದ್ರದ ಎದುರು ಪ್ರತಿಭಟನೆ ನಡೆಸಿದರು.
ಪಪಂ ಮಾಜಿ ಸದಸ್ಯ ಸೋಮೇಶ್ವರ ನಾಯ್ಕ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಆರೋಗ್ಯ ಕೇಂದ್ರವನ್ನು ರವೀಂದ್ರ ನಗರದಲ್ಲಿಯೇ ಮುಂದುವರಿಸಬೇಕು ಎಂದು ಒತ್ತಾಯಿಸಲಾಯಿತು.ಆರೋಗ್ಯ ಕೇಂದ್ರ ಸ್ಥಗಿತಗೊಳ್ಳಲಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ಹಿಂದೆ ತಹಶೀಲ್ದಾರ್ ಎಂ.ಆರ್. ಕುಲಕರ್ಣಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ. ನರೇಂದ್ರ ಪವಾರ ಅವರಿಗೆ ಸ್ಥಳೀಯರು ಮನವಿ ಸಲ್ಲಿಸಿದ್ದರು.
ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಲೊಯೊಲಾ ವಿಕಾಸ ಕೇಂದ್ರದಲ್ಲಿ ಮಕ್ಕಳಿಗಾಗಿ ಮೂರು ದಿನಗಳ ದಸರಾ ಶಿಬಿರ
ಇದೀಗ ಕೇಂದ್ರ ಬಂದ್ ಆಗಲಿದೆ ಎಂಬ ಮಾತುಗಳು ಮತ್ತೆ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಒಗ್ಗೂಡಿ ಪ್ರತಿಭಟನೆ ನಡೆಸಿದರು. ಸ್ಥಳೀಯರಾದ ಪುಷ್ಪಾ ಬಿಣಗೇಕರ ಹಾಗೂ ಪುಷ್ಪಾ ಗಾಳಪ್ಪನವರ್ ಮಾತನಾಡಿ, ಕಳೆದ ಆರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಕೇಂದ್ರದಿಂದ ರವೀಂದ್ರ ನಗರ, ವಡ್ಡರ ಕಾಲೋನಿ ಸೇರಿದಂತೆ ಸುತ್ತಮುತ್ತಲಿನ ನಿವಾಸಿಗಳಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ತಿಳಿಸಿದರು.
ಹಿರಿಯ ನಾಗರಿಕರು, ಬಡವರು ಹಾಗೂ ಮಕ್ಕಳಿಗೆ ಸ್ಥಳೀಯವಾಗಿಯೇ ಚಿಕಿತ್ಸೆ ಮತ್ತು ಔಷಧಿಗಳು ದೊರೆಯುತ್ತಿದ್ದು, ಇದರಿಂದ ದೂರದ ತಾಲೂಕು ಆಸ್ಪತ್ರೆಗೆ ತೆರಳುವ ಅನಿವಾರ್ಯತೆ ತಪ್ಪಿದೆ. ಹೀಗಾಗಿ ಕೇಂದ್ರವನ್ನು ಸ್ಥಗಿತಗೊಳಿಸದೆ ಹಿಂದಿನಂತೆಯೇ ಮುಂದುವರಿಸಬೇಕು ಎಂದು ಆಗ್ರಹಿಸಿದರು.
ಅಧಿಕಾರಿಗಳು ಹಾಗೂ ಶಾಸಕ ಶಿವರಾಮ ಹೆಬ್ಬಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಕೇಂದ್ರದ ಮುಂದುವರಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.




