ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಮೇ 27 ಹಾಗೂ 28ರಂದು ರಜೆ ಘೋಷಿಸಿ ಆದೇಶಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ(ಜಿಲ್ಲಾಧಿಕಾರಿ) ಈ ಬಗ್ಗೆ ಆದೇಶ ಹೊರಡಿಸಿದ್ದು, “ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಮೇ 28ರವರೆಗೆ ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ” ಎಂದು ಆದೇಶದಲ್ಲಿ ತಿಳಿಸಿದ್ದಾರೆ.
