16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಜಾರ್ಖಂಡ್‌ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಕ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಈ ಘಟನೆ ಮೇ 16 ರಂದು ಮುಫಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಸೋಮವಾರ ಸಂಜೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಅಪ್ರಾಪ್ತ ಬಾಲಕನ ಮೇಲೆ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ
ಮೇ 17ರಂದು ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮದುವೆ ಕಾರ್ಯಕ್ರಮಕ್ಕಾಗಿ ಸಂಬಂಧಿಕರ ಮನೆಗೆ ಹೋಗಿದ್ದ ವೇಳೆ ವ್ಯಕ್ತಿಯೋರ್ವ ಬಲವಂತವಾಗಿ ನಿರ್ಜನ ಸ್ಥಳಕ್ಕೆ ಕರೆದೊಯ್ದು, ಆತನ ನಾಲ್ವರು ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿಸಿದ್ದಾಳೆ.
“ಎಫ್‌ಐಆರ್ ಆಧರಿಸಿ, ತಂಡವನ್ನು ರಚಿಸಲಾಗಿದ್ದು, ಸೋಮವಾರ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು” ಎಂದು ಮುಫಸಿಲ್ ಪೊಲೀಸ್ ಠಾಣೆಯ ಉಸ್ತುವಾರಿ ಸತ್ಯಂ ಕುಮಾರ್ ತಿಳಿಸಿದ್ದಾರೆ. ಬಾಲಕಿಯ ವೈದ್ಯಕೀಯ ಪರೀಕ್ಷೆಯನ್ನು ಸಹ ನಡೆಸಲಾಗಿದೆ.
ಸದ್ಯ ದೇಶದಲ್ಲಿ ಅಪ್ರಾಪ್ತರು ಅಪರಾಧ ಕೃತ್ಯದಲ್ಲಿ ಭಾಗಿಯಾಗುವುದು ಅಧಿಕವಾಗಿ ವರದಿಯಾಗುತ್ತಿದೆ. ಇತ್ತೀಚೆಗೆ ಬೆಳಗಾವಿಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರನ್ನು ಬಂಧಿಸಲಾಗಿದೆ. ಹಾಗೆಯೇ ಚೆನ್ನೈನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 7 ಮಂದಿ ಅಪ್ರಾಪ್ತ ಬಾಲಕರನ್ನು ಬಂಧಿಸಲಾಗಿದೆ.
