ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿರುವ ವೈಷ್ಣೋದೇವಿ ದೇಗುಲದ ಬಳಿ ಭಾರೀ ಮಳೆಯಿಂದ ಭಾರಿ ಭೂಕುಸಿತ ಸಂಭವಿಸಿ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ರಿಯಾಸಿ ಎಸ್‌ಎಸ್‌ಪಿ ಪರಮವೀರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
ಇದಕ್ಕೂ ಮೊದಲು, ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರದ ಕತ್ರಾ ಜಿಲ್ಲೆಯ ವೈಷ್ಣೋದೇವಿ ದೇಗುಲದ ಬಳಿ ಸಂಭವಿಸಿದ ಭೂಕುಸಿತದಲ್ಲಿ ‘ಅತ್ಯಂತ ದುರಂತ’ ಎಂದು ಕರೆದಿದ್ದಾರೆ. ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಮಾತನಾಡಿದ್ದೇನೆ. ಕೇಂದ್ರದಿಂದ ಸಂಪೂರ್ಣ ಬೆಂಬಲ ಪಡೆಯುವ ಭರವಸೆಯಿದೆ ಎಂದು ಹೇಳಿದರು.
ಇದನ್ನು ಓದಿದ್ದೀರಾ? ಧಾರವಾಡ | ಭಾರೀ ಮಳೆ ಹಿನ್ನೆಲೆ ಆರೆಂಜ್ ಅಲರ್ಟ್ ಘೋಷಣೆ: ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅಮಿತ್ ಶಾ, ಘಟನೆಯ ನಂತರ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ತಂಡಗಳನ್ನು ಈಗಾಗಲೇ ಸ್ಥಳಕ್ಕೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ. “ಜಮ್ಮು ಮತ್ತು ಕಾಶ್ಮೀರದಲ್ಲಿ ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಭಾರೀ ಮಳೆಯಿಂದ ಉಂಟಾದ ಭೂಕುಸಿತ ಘಟನೆ ಅತ್ಯಂತ ದುಃಖಕರ. ಈ ನಿಟ್ಟಿನಲ್ಲಿ, ನಾನು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಮತ್ತು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಮಾತನಾಡಿದ್ದೇನೆ” ಎಂದು ತಿಳಿಸಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕುಟುಂಬಗಳಿಗೆ ಸಂತಾಪ ಸೂಚಿಸಿದರು. ಅಪಘಾತದಲ್ಲಿ ಗಾಯಗೊಂಡವರಿಗೆ ತಕ್ಷಣ ಸಹಾಯವನ್ನು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಎಲ್‌ಜಿ, “ಶ್ರೀ ಮಾತಾ ವೈಷ್ಣೋದೇವಿ ದೇಗುಲದಲ್ಲಿ ನಿರಂತರ ಮಳೆಯಿಂದ ಉಂಟಾದ ದುರದೃಷ್ಟಕರ ಭೂಕುಸಿತವು ಭಕ್ತರ ಪ್ರಾಣವನ್ನು ಬಲಿ ತೆಗೆದುಕೊಂಡಿದೆ ಎಂದು ತಿಳಿದು ತೀವ್ರ ದುಃಖವಾಯಿತು. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ತಕ್ಷಣದ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಹೇಳಿದರು.
