ಖಾಸಗಿ ಬಸ್ ಒಂದು ಕಮರಿಗೆ ಬಿದ್ದು ಮಹಿಳೆ ಸೇರಿದಂತೆ ಐದು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಮಂಗಳವಾರ ಪಂಜಾಬ್‌ನ ಫರೀದ್‌ಕೋಟ್ ಜಿಲ್ಲೆಯಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ 22ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಫರೀದ್‌ಕೋಟ್- ಕೋಟಕ್‌ಪುರ ರಸ್ತೆಯಲ್ಲಿ ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ 36 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಮುಕ್ತಸರ್‌ನಿಂದ ಅಮೃತಸರ ದಾರಿಯಲ್ಲಿ ಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಭೀಕರ ಅಪಘಾತ: ಕುಂಭಮೇಳಕ್ಕೆ ತೆರಳುತ್ತಿದ್ದ 10 ಮಂದಿ ದುರ್ಮರಣ
ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದು ಬಳಿಕ ಸುಮಾರು 10 ಅಡಿ ಎತ್ತರದ ಸೇತುವೆಯಿಂದ ಕಂದಕಕ್ಕೆ ಉರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಎಂದು ಫರೀದ್‌ಕೋಟ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಜ್ಞಾ ಜೈನ್ ತಿಳಿಸಿದ್ದಾರೆ.
ಮೃತರಲ್ಲಿ ನಾಲ್ವರು ಮುಕ್ತ್‌ಸರ್ ಜಿಲ್ಲೆಯ ನಿವಾಸಿಗಳು ಎನ್ನಲಾಗಿದೆ. 26 ಪ್ರಯಾಣಿಕರನ್ನು ಫರೀದ್‌ಕೋಟ್‌ನ ಗುರು ಗೋವಿಂದ ಸಿಂಗ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಇನ್ನು ಗಾಯಾಳುಗಳಲ್ಲಿ ಇಬ್ಬರನ್ನು ಅಮೃತಸರದ ಮತ್ತೊಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಒಬ್ಬರು ಪ್ರಯಾಣಿಕರು ಒಂದು ಕೈ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಪಂಜಾಬ್ ವಿಧಾನಸಭಾ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
