ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಜುಲೈ 25 ರಂದು ನಡೆದ ‘ಬಿಹಾರ ಬಂದ್’ ವೇಳೆ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಎಕೆ 47 ರೈಫಲ್‌ನಿಂದ ಗುಂಡು ಹಾರಿಸಿದ ಆರೋಪದ ಮೇಲೆ ಬಿಹಾರದ ಸಿವಾನ್ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ. ಈ ಆಘಾತಕಾರಿ ಘಟನೆಗೆ ಸಂಬಂಧಿಸಿದಂತೆ ರಾಜ್ಯಸಭಾ ಸಂಸದ ಮನೋಜ್ ಕುಮಾರ್ ಝಾ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದಾರೆ.
ಸಿವಾನ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗಾಯಗೊಂಡ ಮೂವರು ಪ್ರತಿಭಟನಾಕಾರರು ಪಾಟ್ನಾದ ಜಯಪ್ರಭಾ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ. ಗಾಯಾಳುಗಳಲ್ಲಿ 15 ವರ್ಷದ ಎಂಡಿ ಆರಿಫ್ ಎಂಬ ಬಾಲಕನೂ ಸೇರಿದ್ದು, ಆತನ ಕುತ್ತಿಗೆಗೆ ಗುಂಡು ತಗುಲಿದ್ದರಿಂದ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಗುಂಡನ್ನು ಹೊರತೆಗೆದಿದ್ದಾರೆ. ಈ ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವ ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಬಗ್ಗೆ ವಿವರವಾದ ಇಲಾಖಾ ತನಿಖೆ ಆರಂಭಿಸಲಾಗಿದೆ ಹಾಗೂ ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರಾಹುಲ್ ಗಾಂಧಿ ಆಕ್ರೋಶ
ಬಿಹಾರದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಎಕೆ 47 ರೈಫಲ್‌ನಿಂದ ಗುಂಡು ಹಾರಿಸಿರುವುದಕ್ಕೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಡೀ ವ್ಯವಸ್ಥೆಯು ವಿದ್ಯಾರ್ಥಿಗಳ ವಿರುದ್ಧ ಮಾರಣಾಂತಿಕವಾಗಿ ವರ್ತಿಸುತ್ತಿದೆ. ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್‌ಗಳನ್ನು ಬಳಸಲಾಗಿದೆ ಮತ್ತು ಬಿಹಾರದಲ್ಲಿ ಎಕೆ 47 ಸಿಡಿಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ ಅಥವಾ ದೆಹಲಿ ಎಲ್ಲೆಡೆ ಒಂದೇ ರೀತಿಯ ದೌರ್ಜನ್ಯದ ಮಾದರಿ ಇದೆ. ವಿದ್ಯಾರ್ಥಿಗಳ ವಿರುದ್ಧ ಯಾವುದೇ ಎಫ್‌ಐಆರ್ ದಾಖಲಿಸುವುದಿಲ್ಲ ಎಂಬ ಭರವಸೆ ಏನಾಯಿತು?” ಎಂದು ಪ್ರಧಾನಿ ಮೋದಿಯವರನ್ನು ಪ್ರಶ್ನಿಸಿದ ರಾಹುಲ್, ದೇಶದ ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸುವುದರ ಜೊತೆ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಇದೇ ವೇಳೆ, ನೀಟ್ ಪೇಪರ್ ಸೋರಿಕೆ ಆರೋಪದ ಮೇಲೆ ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಜುಲೈ 22 ಮತ್ತು ಜುಲೈ 25 ರಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸುಮಾರು 200 ವಿದ್ಯಾರ್ಥಿಗಳನ್ನು 24 ಗಂಟೆಗಳಿಗೂ ಹೆಚ್ಚು ಕಾಲ ಪೊಲೀಸ್ ಠಾಣೆಗಳಲ್ಲಿ ಕಸ್ಟಡಿಯಲ್ಲಿ ಇರಿಸಲಾಗಿರುವುದರ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
ಬಿಹಾರ ಹಾಗೂ ಬಂಗಾಳದಲ್ಲಿ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಿಸುತ್ತಿರುವ ಕುರಿತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.





