ಹಿಂದೆಂದೂ ಕಂಡರಿಯದ ಭೀಕರ ಪ್ರವಾಹಕ್ಕೆ ತುತ್ತಾಗಿ ಇನ್ನೂ ಚೇತರಿಸಿಕೊಳ್ಳಲಾಗದೆ ನಲುಗುತ್ತಿರುವ ಅಸ್ಸಾಂ ರಾಜ್ಯದಲ್ಲಿ ಅಮಾನುಷ ಪ್ರಕರಣವೊಂದು ವರದಿಯಾಗಿದೆ. 15 ವರ್ಷದ ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಅಸ್ಸಾಂನ ಹೈಲಾಕಂಡಿ ಜಿಲ್ಲೆಯಲ್ಲಿ ನಡೆದಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣ ಸಂಬಂಧ ಐವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಆಗಸ್ಟ್ 1ರಂದು ಈ ಘಟನೆ ನಡೆದಿದ್ದು, ಎರಡು ದಿನಗಳ ಬಳಿಕ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ–6 ತಡೆದು ಪ್ರತಿಭಟನೆ ನಡೆಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಈ ಹೆದ್ದಾರಿ ಅಸ್ಸಾಂ ಮತ್ತು ಮಿಜೋರಾಂ ರಾಜ್ಯಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದೆ.
ಮಾಹಿತಿಯ ಪ್ರಕಾರ, ಬಾಲಕಿ ಕುಟುಂಬದವರೊಂದಿಗೆ ಸಂಬಂಧಿಕರ ಮನೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ತೆರಳಿದ್ದಳು. ಅಲ್ಲಿ ಸಂಬಂಧಿಯೊಂದಿಗೆ ಉಂಟಾದ ವಾಗ್ವಾದದ ಹಿನ್ನೆಲೆಯಲ್ಲಿ ಆಕೆ ಒಬ್ಬಳೇ ಮನೆಗೆ ಹಿಂದಿರುಗಿದ್ದಳು ಎನ್ನಲಾಗಿದೆ. ಈ ವೇಳೆ ಆರೋಪಿಗಳು ಆಕೆಯನ್ನು ಗುರಿಯಾಗಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿ, ಬಳಿಕ ಭಾರವಾದ ವಸ್ತುವಿನಿಂದ ತಲೆ ಮತ್ತು ಮುಖದ ಮೇಲೆ ಭೀಕರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಕುಟುಂಬಸ್ಥರೂ ಗುರುತು ಹಿಡಿಯಲಾರದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕೆಲವು ಮಾಧ್ಯಮ ವರದಿಗಳಲ್ಲಿ ಬಾಲಕಿಯ ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್ ತುರುಕಲಾಗಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.
ಅಂದು ರಾತ್ರಿ ಮನೆಗೆ ಮರಳಿದ ಕುಟುಂಬದವರು ಬಾಲಕಿಯನ್ನು ರಕ್ತದ ಮಡುವಿನಲ್ಲಿ ಮೃತ ಸ್ಥಿತಿಯಲ್ಲಿ ಕಂಡಿದ್ದು, ಮುಖ ಸಂಪೂರ್ಣ ನಜ್ಜುಗುಜ್ಜಾಗಿದ್ದರಿಂದ ಗುರುತಿಸಲು ಸಹ ಕಷ್ಟವಾಗಿತ್ತು ಎಂದು ವರದಿಯಾಗಿದೆ.
ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಹೈಲಾಕಂಡಿ ಜಿಲ್ಲಾ ಹಿರಿಯ ಪೊಲೀಸ್ ಅಧೀಕ್ಷಕ ಅಮಿತಾಭ್ ಸಿನ್ಹಾ, “ಕುಟುಂಬಸ್ಥರು ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿದ್ದಾರೆ. ಆದರೆ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ಈ ಬಗ್ಗೆ ಸ್ಪಷ್ಟತೆ ಸಿಗಲಿದೆ. ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.
ಘಟನೆಯ ಬಳಿಕ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ–6 ಅನ್ನು ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಹಲವು ಗಂಟೆಗಳ ಕಾಲ ನೂರಾರು ವಾಹನಗಳು ಸಂಚಾರ ದಟ್ಟಣೆಯಲ್ಲಿ ಸಿಲುಕಿದ್ದವು. ಪ್ರಕರಣದ ತನಿಖೆಗಾಗಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಇದುವರೆಗೆ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ತನಿಖೆಯ ಬಳಿಕ ಘಟನೆಯ ನಿಖರ ಸ್ವರೂಪ ಸ್ಪಷ್ಟವಾಗುವ ಸಾಧ್ಯತೆಯಿದೆ.




