15 ವರ್ಷದ ಬಾಲಕಿ ಮೇಲೆ ಕಾಮುಕ ಕ್ರೂರಿಗಳು ಅತ್ಯಾಚಾರ ಎಸಗಿ, ಅತ್ಯಂತ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅಸ್ಸಾಂನ ಹೈಲಾಕಂಡಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಶನಿವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಕಟ್ಲಿಚೆರಾ ಪೊಲೀಸ್ ಠಾಣೆ ವ್ಯಾಪ್ತಿಯ ಅಲೋಯಿಚೋರಾ ಪ್ರದೇಶದಲ್ಲಿ ಘಟನೆ ನಡೆದಿದೆ. ಬಾಲಕಿ ಮತ್ತು ಆಕೆಯ ಕುಟುಂಬದವರು ಸಂಬಂಧಿಕರ ಮನೆಯಲ್ಲಿ ನಡೆದ ಔತಣಕೂಟಕ್ಕೆ ತೆರಳಿದ್ದರು. ಈ ವೇಳೆ, ಸಂಬಂಧಿಕರೊಬ್ಬರೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಬಾಲಕಿ ಮೊದಲೇ ಮನೆಗೆ ಹಿಂದಿರುಗಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಂತರ, ಕುಟುಂಬಸ್ಥರೂ ಮನೆಗೆ ಮರಳಿದ್ದಾರೆ. ಮನೆಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿಯ ಮುಖ ಮತ್ತು ತಲೆಗೆ ತೀವ್ರವಾಗಿ ಹಲ್ಲೆ ನಡೆಸಲಾಗಿದ್ದು, ಮೃತದೇಹವನ್ನು ಗುರುತಿಸಲು ಸಹ ಕಷ್ಟವಾಗುವ ಸ್ಥಿತಿಯಲ್ಲಿತ್ತು. ಆಕೆಯ ಖಾಸಗಿ ಅಂಗಗಳಿಗೆ ರಾಡ್ ಚುಚ್ಚಲಾಗಿತ್ತು ಎಂದು ಕುಟುಂಬದವರು ತಿಳಿಸಿದ್ದಾರೆ.
ಕುಟುಂಬದ ಆರೋಪದ ಪ್ರಕಾರ, ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಲಾಗಿದೆ. ಆದರೆ, ಲೈಂಗಿಕ ದೌರ್ಜನ್ಯ ನಡೆದಿದೆಯೇ ಎಂಬುದನ್ನು ವೈದ್ಯಕೀಯ ಪರೀಕ್ಷೆ ಮತ್ತು ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ಖಚಿತಪಡಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಗೆ ಆಕ್ರೋಶಗೊಂಡ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ–6 ಅನ್ನು ತಡೆದು ಪ್ರತಿಭಟನೆ ನಡೆಸಿ, ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ.
ಘಟನೆ ಕುರಿತು ಜಿಲ್ಲಾ ಹಿರಿಯ ಪೊಲೀಸ್ ಅಧೀಕ್ಷಕ (SSP) ಅಮಿತಾಭ್ ಸಿನ್ಹಾ ಮಾತನಾಡಿ, ಪ್ರಕರಣ ದಾಖಲಿಸಲಾಗಿದ್ದು, ತನಿಖೆಯ ಭಾಗವಾಗಿ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.



