ಓಮನ್ ಕರಾವಳಿಯ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗೊಂದರ ಮೇಲೆ ಇರಾನ್ ನಡೆಸಿದ ಭಾರಿ ದಾಳಿಯಲ್ಲಿ ಓರ್ವ ಭಾರತೀಯ ನಾಪತ್ತೆಯಾಗಿದ್ದು, ಉಳಿದ 10 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಸೈಪ್ರಸ್ ದೇಶದ ಧ್ವಜವನ್ನು ಹೊಂದಿದ್ದ ‘ಜಿಎಫ್ಎಸ್ ಗ್ಯಾಲಕ್ಸಿ’ ಎಂಬ ವಾಣಿಜ್ಯ ಹಡಗಿನ ಮೇಲೆ ಈ ದಾಳಿ ನಡೆದಿದೆ. ದಾಳಿಯ ಪರಿಣಾಮ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹಡಗಿಗೆ ತೀವ್ರ ಸ್ವರೂಪದ ಹಾನಿಯಾಗಿದೆ ಎಂದು ವರದಿಗಳು ತಿಳಿಸಿವೆ.
ಹಡಗಿನಲ್ಲಿ ಒಟ್ಟು 11 ಜನ ಭಾರತೀಯರಿದ್ದರು. ಈ ಪೈಕಿ 10 ಜನರನ್ನು ಈಗಾಗಲೇ ರಕ್ಷಿಸಲಾಗಿದೆ. ನಾಪತ್ತೆಯಾಗಿರುವ ಓರ್ವ ಭಾರತೀಯನಿಗಾಗಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ. ಓಮನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ರಕ್ಷಣಾ ಕಾರ್ಯಾಚರಣೆಗಾಗಿ ಒಮಾನ್ ಸರ್ಕಾರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ.
ಮತ್ತೊಂದೆಡೆ ಹಡಗು ಅನಧಿಕೃತ ಮಾರ್ಗದಲ್ಲಿ ಸಾಗಿದ್ದರಿಂದ ಎಚ್ಚರಿಕೆ ನೀಡುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇರಾನ್ ತನ್ನ ದಾಳಿಯನ್ನು ಸಮರ್ಥಿಸಿಕೊಂಡಿದೆ. ಅಲ್ಲದೆ, ಪ್ರಮುಖ ತೈಲ ಸಾಗಾಣಿಕಾ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮುಚ್ಚಿದೆ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ವಾಣಿಜ್ಯ ಹಡಗುಗಳ ಮೇಲಿನ ನಿರಂತರ ದಾಳಿಗಳು ಆತಂಕಕಾರಿಯಾಗಿದ್ದು, ಮಧ್ಯಪ್ರಾಚ್ಯದಲ್ಲಿ ತಕ್ಷಣವೇ ಉದ್ವಿಗ್ನತೆಯನ್ನು ಶಮನಗೊಳಿಸಬೇಕು ಎಂದು ಆಗ್ರಹಿಸಿದೆ. ಅಂತರರಾಷ್ಟ್ರೀಯ ಕಾನೂನುಗಳ ಪ್ರಕಾರ ವಾಣಿಜ್ಯ ಹಡಗುಗಳು ಹಾಗೂ ನಾಗರಿಕ ಮೂಲಸೌಕರ್ಯಗಳ ಮೇಲೆ ಯಾವುದೇ ಕಾರಣಕ್ಕೂ ದಾಳಿ ಮಾಡಬಾರದು. ಜೊತೆಗೆ ಶಾಂತಿ ಮತ್ತು ಸ್ಥಿರತೆಯನ್ನು ಮರುಸ್ಥಾಪಿಸಲು ರಾಜತಾಂತ್ರಿಕ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಭಾರತ ಸರ್ಕಾರ ಸ್ಪಷ್ಟಪಡಿಸಿದೆ.
ಇರಾನ್ ದಾಳಿಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಅಮೆರಿಕ, ಕನಿಷ್ಠ ಮೂರು ಸುತ್ತಿನ ಪ್ರತಿದಾಳಿಗಳನ್ನು ನಡೆಸಿದೆ. ಹಡಗಿನಲ್ಲಿದ್ದ ಓರ್ವ ನಾಗರಿಕ ಸಿಬ್ಬಂದಿ ನಾಪತ್ತೆಯಾಗಿರುವುದನ್ನು ಅಮೆರಿಕ ಕೂಡ ಖಚಿತಪಡಿಸಿದ್ದು, ಹಡಗು ಮುಂದಿನ ಪ್ರಯಾಣವನ್ನು ಮುಂದುವರಿಸಲಾಗದಷ್ಟು ಹಾನಿಗೀಡಾಗಿದೆ ಎಂದು ತಿಳಿಸಿದೆ. ವಾಣಿಜ್ಯ ಹಡಗುಗಳ ಮೇಲೆ ದಾಳಿ ನಡೆಸುವ ಇರಾನ್ನ ಸಾಮರ್ಥ್ಯವನ್ನು ಕುಗ್ಗಿಸಲು ಅಮೆರಿಕ ತಕ್ಕ ಬೆಲೆ ತೆರುವಂತೆ ಮಾಡುತ್ತಿದೆ ಹಾಗೂ ಅಂತಾರಾಷ್ಟ್ರೀಯ ಜಲಮಾರ್ಗದಲ್ಲಿ ಮುಕ್ತ ಸಂಚಾರಕ್ಕೆ ಅಡ್ಡಿಯುಂಟುಮಾಡುವ ಇರಾನ್ನ ನಡೆಗೆ ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ ಎಚ್ಚರಿಕೆ ನೀಡಿದೆ.
ಇರಾನ್ ಮತ್ತು ಓಮನ್ ವಿದೇಶಾಂಗ ಸಚಿವರು ಹಾರ್ಮುಜ್ ಜಲಸಂಧಿಯ ವಿಚಾರವಾಗಿ ಚರ್ಚೆ ನಡೆಸಿದ ಕೇವಲ ಒಂದು ದಿನದ ಬಳಿಕ ಈ ಉದ್ವಿಗ್ನತೆ ಸೃಷ್ಟಿಯಾಗಿದ್ದು, ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಯುದ್ಧದ ಭೀತಿ ಆವರಿಸಿದೆ.




