ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿ ನ್ಯಾಯಾಲಯ ದೋಷಮುಕ್ತಗೊಳಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ತೀರ್ಪಿನ ಬೆನ್ನಲ್ಲೇ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕೇಂದ್ರ ಸರ್ಕಾರ ಮತ್ತು ವ್ಯವಸ್ಥೆಯ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ತೀರ್ಪಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ವಿನೇಶ್ ಫೋಗಟ್, “ಮೊದಲ ದಿನದಿಂದಲೂ ಸರ್ಕಾರ ಹಾಗೂ ಇಡೀ ವ್ಯವಸ್ಥೆ ಬ್ರಿಜ್ ಭೂಷಣ್ ಅವರನ್ನು ರಕ್ಷಿಸುವ ಕೆಲಸ ಮಾಡುತ್ತಿದೆ” ಎಂದು ಗಂಭೀರ ಆರೋಪ ಮಾಡಿದ್ದಾರೆ. ಆಡಳಿತ ಪಕ್ಷದ ಪ್ರಭಾವಿ ನಾಯಕನ ವಿರುದ್ಧ ಎಫ್‌ಐಆರ್ ದಾಖಲಿಸಲು ನಾವು ಅಪಾರ ಧೈರ್ಯ ಮಾಡಿದ್ದೆವು, ಆದರೆ ತಮ್ಮ ತೋಳ್ಬಲ ಬಳಸಿ ಅವರು ಹಲವು ಹೆಣ್ಣುಮಕ್ಕಳನ್ನು ಬೆದರಿಸಿ ಪ್ರಕರಣದಿಂದ ಹಿಂದೆ ಸರಿಯುವಂತೆ ಮಾಡಿದರು. ಆದರೂ ನಾವು ಛಲ ಬಿಡದೆ ಹೋರಾಡಿದ್ದೆವು, ಇದೀಗ ನ್ಯಾಯಾಲಯದ ತೀರ್ಪು ನಿರಾಸೆ ಮೂಡಿಸಿದ್ದು, ಇದರ ವಿರುದ್ಧ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಇದೇ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ, ಸರ್ಕಾರದ ದ್ವಂದ್ವ ನೀತಿಯನ್ನು ಕಟುವಾಗಿ ಟೀಕಿಸಿದ್ದಾರೆ. “ಸರ್ಕಾರ ಒಂದು ಕಡೆ ಮಹಿಳಾ ಸಬಲೀಕರಣ, ಮಹಿಳಾ ಮೀಸಲಾತಿ ಮತ್ತು ಯುವಜನತೆಯ ಪರ ಎಂದು ಭಾಷಣ ಮಾಡುತ್ತದೆ. ಆದರೆ, ವಾಸ್ತವದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರನ್ನು ರಕ್ಷಿಸುವ ಬೂಟಾಟಿಕೆಯ ಕೆಲಸ ಮಾಡುತ್ತಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರು ಮಂದಿ ಮಹಿಳಾ ಕುಸ್ತಿಪಟುಗಳು ದಾಖಲಿಸಿದ್ದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಭಾರತೀಯ ಕುಸ್ತಿ ಫೆಡರೇಷನ್‌ನ (WFI) ಮಾಜಿ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿ ನ್ಯಾಯಾಲಯ ಇಂದು (ಸೋಮವಾರ) ಖುಲಾಸೆಗೊಳಿಸಿದೆ. ಈ ಆರೋಪಗಳು 2023ರಲ್ಲಿ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದವು. ಒಲಿಂಪಿಕ್ ಪದಕ ವಿಜೇತರು ಹಾಗೂ ಪ್ರಮುಖ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಭಜರಂಗ್ ಪೂನಿಯಾ ಸೇರಿದಂತೆ ಹಲವರು ನವದೆಹಲಿಯ ಜಂತರ್ ಮಂತರ್‌ನಲ್ಲಿ ತಿಂಗಳುಗಳ ಕಾಲ ಧರಣಿ ನಡೆಸಿದ್ದರು.
ಬ್ರಿಜ್‌ಭೂಷಣ್ ಅವರನ್ನು ಬಂಧಿಸಬೇಕು ಹಾಗೂ ಫೆಡರೇಷನ್‌ನಿಂದ ವಜಾಗೊಳಿಸಬೇಕು ಎಂದು ಅವರು ಪಟ್ಟು ಹಿಡಿದಿದ್ದರು. ನೂತನ ಸಂಸತ್ ಭವನದತ್ತ ಮೆರವಣಿಗೆ ನಡೆಸುತ್ತಿದ್ದ ಕ್ರೀಡಾಪಟುಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆಯು ಅಂತಾರಾಷ್ಟ್ರೀಯ ಮಟ್ಟದಲ್ಲೂ ತೀವ್ರ ಟೀಕೆಗೆ ಗುರಿಯಾಗಿತ್ತು.




