ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ರಕ್ಷಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವಂತ ದೇಶದ ಜನರ ವಿರುದ್ಧವೇ “ಯುದ್ಧ ಸಾರಿದ್ದಾರೆ” ಎಂದು CJP ಸಂಸ್ಥಾಪಕ ಅಭಿಜೀತ್ ದೀಪ್ಕೆ ಆರೋಪಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದವರನ್ನು ಹಾಗೂ ಪ್ರತಿಪಕ್ಷ ನಾಯಕರನ್ನು ವಶಕ್ಕೆ ಪಡೆದಿರುವ ಕ್ರಮವನ್ನು ಅವರು ಖಂಡಿಸಿದ್ದಾರೆ.
ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (AISA) ನಾಯಕಿ ನೇಹಾ ಬೋರಾ, ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ನಾಯಕಿ ಐಶಾ ಘೋಷ್ ಹಾಗೂ ನಟ ಪ್ರಕಾಶ್ ರಾಜ್ ಅವರೊಂದಿಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೀಪ್ಕೆ, CJP ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತಿಹಾರ್ ಜೈಲಿಗಟ್ಟಿರುವ ಪೊಲೀಸರು ಕ್ರಮವನ್ನು ಖಂಡಿಸಿದ್ದಾರೆ.
ಗ್ಯಾನೇಶ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ವಿದ್ಯಾರ್ಥಿಗಳು, ಯುವ ಪ್ರತಿಭಟನಾಕಾರರು, ಪ್ರತಿಪಕ್ಷ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರತಿಭಟನೆಗಳಿಗೆ ಪ್ರತಿಕ್ರಿಯೆಯಾಗಿ ದೆಹಲಿಯಾದ್ಯಂತ ಭಾರೀ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಮೆಟ್ರೋ ನಿಲ್ದಾಣಗಳನ್ನು ಮುಚ್ಚಿರುವುದು ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ಹೇರಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್ ಮತ್ತು ಪಿಣರಾಯಿ ವಿಜಯನ್ ಸೇರಿದಂತೆ ಪ್ರತಿಪಕ್ಷ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಮುಖ್ಯ ಚುನಾವಣಾ ಆಯುಕ್ತರನ್ನು ರಕ್ಷಿಸಲು ಸರ್ಕಾರ ತನ್ನ ಆಡಳಿತ ಯಂತ್ರವನ್ನು ಬಳಸುತ್ತಿದೆ. ರಾಷ್ಟ್ರ ರಾಜಧಾನಿಯಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ. ರಾಷ್ಟ್ರಧ್ವಜ ಹಾರಿಸುವುದನ್ನೇ ಕಾನೂನು ಉಲ್ಲಂಘನೆಯಂತೆ ಪರಿಗಣಿಸಲಾಗುತ್ತಿದೆ. ತ್ರಿವರ್ಣ ಧ್ವಜದೊಂದಿಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದಾಗ ಇಂತಹ ಕಠಿಣ ಕ್ರಮಗಳನ್ನು ಏಕೆ ಕೈಗೊಳ್ಳಲಾಗುತ್ತಿದೆ? ದೆಹಲಿಯಲ್ಲಿ ಕೈಗೊಂಡಿರುವ ಭಾರೀ ಭದ್ರತಾ ವ್ಯವಸ್ಥೆಗಳು ನಗರವನ್ನು ಕೋಟೆಯಂತೆ ಮಾಡಿವೆ ಎಂದು ಆರೋಪಿಸಿದರು.
ಗ್ಯಾನೇಶ್ ಕುಮಾರ್ ಅವರಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಬೆಂಬಲದ ಬಗ್ಗೆಯೂ ಪ್ರಶ್ನಿಸಿರುವ ದೀಪ್ಕೆ, ಮುಖ್ಯ ಚುನಾವಣಾ ಆಯುಕ್ತರು ಬಿಜೆಪಿಗೆ ಚುನಾವಣೆಗಳಲ್ಲಿ ಗೆಲುವು ತಂದುಕೊಡಲು ನೆರವಾಗುತ್ತಿದ್ದಾರೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಜಂತರ್ ಮಂತರ್ನಲ್ಲಿ ಪೊಲೀಸ್ ಬ್ಯಾರಿಕೇಡ್ಗಳನ್ನು ದಾಟಿ ಒಳನುಗ್ಗಿ, ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದ ಬಳಿಕ CJP ಸದಸ್ಯರಾದ ಸೌರವ್ ದಾಸ್, ಆಶುತೋಷ್ ರಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ವಶಕ್ಕೆ ಪಡೆಯಲಾಗಿದ್ದು, 5 ದಿನಗಳ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಇತ್ತೀಚೆಗೆ ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ತೆಗೆದುಹಾಕಲಾಗಿದೆ.
ಈ ಬಂಧನಗಳ ವಿರುದ್ಧ ಪ್ರತಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದಾಸ್ ಮತ್ತು ರಂಕಾ ಅವರ ಬಂಧನವನ್ನು ಖಂಡಿಸಿದ್ದಾರೆ. ಬಂಧನಗಳ ವಿರುದ್ಧ ಪ್ರತಿಭಟನೆ ಮುಂದುವರಿಸುವ ಉದ್ದೇಶದಿಂದ ದೀಪ್ಕೆ ಅವರು ಅಕ್ಟೋಬರ್ 16ರ ಶುಕ್ರವಾರ ಸಂಜೆ 5 ಗಂಟೆಗೆ ದೆಹಲಿಯ ಕನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ‘ತಿರಂಗಾ ಮೋರ್ಚಾ’ ಆಯೋಜಿಸುವುದಾಗಿ ಘೋಷಿಸಿದ್ದಾರೆ. CJP ನಾಯಕರ ವಿರುದ್ಧ ಕೈಗೊಂಡ ಕ್ರಮವನ್ನು ಖಂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಜನರಿಗೆ ಕರೆ ನೀಡಿದ್ದಾರೆ.
ಇದೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ AISA ಕಾರ್ಯಕರ್ತೆ ನೇಹಾ ಬೋರಾ, ಪ್ರತಿಭಟನೆಗಳನ್ನು ವರದಿ ಮಾಡುತ್ತಿದ್ದ ಪತ್ರಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ. ಪತ್ರಕರ್ತರ ಕ್ಯಾಮೆರಾಗಳನ್ನು ಕಸಿದುಕೊಳ್ಳಲಾಗಿದ್ದು, ಪ್ರತಿಭಟನೆಗಳ ವರದಿ ಮುಂದುವರಿಸಿದರೆ ಕ್ಯಾಮೆರಾಗಳನ್ನು ಮರಳಿ ನೀಡುವುದಿಲ್ಲ ಎಂದು ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿದರು. ದೆಹಲಿ ಎಸಿಪಿ ವಿವೇಕ್ ಭಗತ್ ಅವರು ಮಹಿಳಾ ಪತ್ರಕರ್ತೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪವನ್ನೂ ಬೋರಾ ಪ್ರಸ್ತಾಪಿಸಿದರು.
ಈ ದೇಶದಲ್ಲಿ ಸಾಮಾನ್ಯ ಜನರು ನ್ಯಾಯಕ್ಕಾಗಿ ಪೊಲೀಸರನ್ನು ಸಂಪರ್ಕಿಸಿದಾಗ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರು ನಿರ್ದಿಷ್ಟ ರಾಜಕೀಯ ಪಕ್ಷವೊಂದಕ್ಕೆ ಬೆಂಬಲ ನೀಡಿ ಜನರ ಮೇಲೆಯೇ ದಮನಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಬಹಳ ಸಮಯದಿಂದ ನಾವು ಈ ದೇಶದಲ್ಲಿ ನೋಡುತ್ತಿರುವ ಪರಿಸ್ಥಿತಿಗೆ ಇದು ಸ್ಪಷ್ಟ ಉದಾಹರಣೆ ಎಂದು ಬೋರಾ ಹೇಳಿದರು.





