ಕಳೆದ ಜೂನ್ 2ರಂದು ಒಡಿಶಾದ ಬಾಲಸೋರ್‌ನಲ್ಲಿ ನಡೆದ ತ್ರಿವಳಿ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಸಿಬಿಐ, ಶುಕ್ರವಾರ ಮೂವರು ರೈಲ್ವೆ ಅಧಿಕಾರಿಗಳನ್ನು ಬಂಧಿಸಿರುವುದಾಗಿ ವರದಿಯಾಗಿದೆ.
ಕೇಂದ್ರೀಯ ತನಿಖಾ ದಳ (ಸಿಬಿಐ) ಮೂವರು ರೈಲ್ವೆ ಅಧಿಕಾರಿಗಳಾದ ಎಂಜಿನಿಯರ್ ಅರುಣ್ ಕುಮಾರ್ ಮಹಂತ, ಮೊಹಮ್ಮದ್ ಅಮೀರ್ ಖಾನ್ ಮತ್ತು ಪಪ್ಪು ಕುಮಾರ್ ಅವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.
ಘಟನೆಗೆ ಕಾರಣರಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 ಮತ್ತು 201 ರ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಸಿಬಿಐ ತಿಳಿಸಿದೆ.
ರೈಲ್ವೆ ಸುರಕ್ಷತಾ ಆಯುಕ್ತರು (ಸಿಆರ್‌ಎಸ್) ಬುಧವಾರ ಬಾಲಸೋರ್ ಅಪಘಾತದ ವರದಿಯನ್ನು ರೈಲ್ವೆ ಮಂಡಳಿಗೆ ಸಲ್ಲಿಸಿದ ಕೆಲವೇ ದಿನಗಳಲ್ಲಿ ಈ ಬಂಧನ ನಡೆದಿದೆ.