ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅನುಮತಿ ಪಡೆದುಕೊಳ್ಳಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರು ದೆಹಲಿ ಪೊಲೀಸರನ್ನು ಭೇಟಿಯಾಗಿ ಮಾತುಕತೆ ನಡೆಸಲು ನಿರ್ಧರಿಸಿದ್ದಾರೆ.
ದೆಹಲಿ ಪೊಲೀಸರು ಮುಂದಿನ 24 ಗಂಟೆಗಳಲ್ಲಿ ಪ್ರತಿಭಟನೆಗೆ ಹೊಸ ದಿನಾಂಕ ಮತ್ತು ಸ್ಥಳವನ್ನು ನಿಗದಿಪಡಿಸಬೇಕು, ಇಲ್ಲವಾದಲ್ಲಿ ತಾವೇ ಕರೆ ನೀಡಲಿದ್ದೇವೆ ಎಂದು ಸಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಎಎಪಿ ನಾಯಕ ಕೇಜ್ರಿವಾಲ್ ಸೇರಿ ಹಲವರ ಬಂಧನ
ಇತ್ತೀಚೆಗೆ ಸಿಜೆಪಿ ನಾಯಕರಾದ ಅಭಿಜೀತ್ ದೀಪ್ಕೆ, ಸೌರವ್ ದಾಸ್ ಮತ್ತು ಅಶುತೋಶ್ ರಂಕಾ ಅವರನ್ನು ದೆಹಲಿ ಪೊಲೀಸರು ವಿಮಾನದಲ್ಲೇ ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ದೆಹಲಿ ಕಾರ್ಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದ ಮೇರೆಗೆ ಅವರನ್ನು ಬಿಡುಗಡೆ ಮಾಡಲಾಗಿದೆ. ಈ ಬಂಧನಗಳು ಮತ್ತು ದೆಹಲಿಯಲ್ಲಿ ಕಟ್ಟುನಿಟ್ಟಿನ ಭದ್ರತಾ ನಿರ್ಬಂಧಗಳನ್ನು ಹೇರಿರುವುದನ್ನು ಪ್ರತಿಭಟನಾಕಾರರು ತೀವ್ರವಾಗಿ ವಿರೋಧಿಸಿದ್ದಾರೆ.
ಇನ್ನು ಈ ಹಿಂದೆಯೂ ಹಲವು ಬಾರಿ ಪೊಲೀಸರು ಸಿಜೆಪಿ ಪ್ರತಿಭಟನೆಗೆ ಅನುಮತಿ ನೀಡಿಲ್ಲ. ಆದರೆ ಪ್ರತಿಭಟಿಸುವುದು ನಮ್ಮ ಮೂಲಭೂತ ಹಕ್ಕು ಎಂದು ಪ್ರತಿಪಾದಿಸಿರುವ ಸಿಜೆಪಿ ನಾಯಕರು ಪ್ರತಿಭಟನೆ ಮುಂದಾಗಿದ್ದರು. ಆದರೆ ಅಷ್ಟರಲ್ಲೇ ಹಲವು ನಾಯಕರನ್ನು ಗೃಹ ಬಂಧನದಲ್ಲಿ ಇಡಲಾಗಿದೆ. ಹಲವರನ್ನು ಬಂಧಿಸಲಾಗಿದೆ. ಈ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಮತ್ತೊಂದೆಡೆ, ಸಿಜೆಪಿ ನಾಯಕರ ಪೊಲೀಸ್ ಭೇಟಿಯ ನಡುವೆಯೇ, ವಿರೋಧ ಪಕ್ಷಗಳು (ಇಂಡಿಯಾ ಒಕ್ಕೂಟ) ಸಿಇಸಿ ಕ್ರಮಗಳನ್ನು ಖಂಡಿಸಿ ನವದೆಹಲಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ಸಿದ್ಧತೆ ನಡೆಸಿವೆ.




