ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಶುಕ್ರವಾರ ನಡೆದ ಪ್ರತಿಭಟನೆ ವೇಳೆ ಸುಮಾರು 1,000 ಮಂದಿಯನ್ನು ವಶಕ್ಕೆ ಪಡೆದಿರುವ ದೆಹಲಿ ಪೊಲೀಸರು, ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಈ ಮಧ್ಯೆ, ಶನಿವಾರವೂ (ಅ.10) ಪ್ರತಿಭಟನೆ ಮುಂದುವರಿಯಲಿದ್ದು, ಜಂತರ್ ಮಂತರ್‌ಗೆ ಮರಳುವಂತೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ಅಧ್ಯಕ್ಷೆ ನೇಹಾ ಬೋರಾ ಕರೆ ನೀಡಿದ್ದಾರೆ.
ಅಕ್ಟೋಬರ್ 2ರಂದು ಗಾಂಧಿ ಜಯಂತಿಯಂದು ದೆಹಲಿ ಮತ್ತು ಮುಂಬೈನಲ್ಲಿ CJP, ಪ್ರತಿಪಕ್ಷಗಳು ಹಾಗೂ ವಿವಿಧ ವಿದ್ಯಾರ್ಥಿ ಸಂಘಟನೆಗಳು ಜಂಟಿಯಾಗಿ ಪ್ರತಿಭಟನೆ ಆರಂಭಿಸಿದ್ದವು. SIR ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಹಾಗೂ ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಾವಿರಾರು ಜನರು ಭಾಗವಹಿಸಿದ್ದ ಬೃಹತ್ ಪ್ರತಿಭಟನೆಗೆ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ನೇತೃತ್ವ ವಹಿಸಿದ್ದರು. ಇದರ ಬೆನ್ನಲ್ಲೇ, ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡದಿದ್ದರೆ ಅಕ್ಟೋಬರ್ 10ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಮತ್ತೊಂದು ಪ್ರತಿಭಟನೆ ನಡೆಸುವುದಾಗಿ ಅವರು ಶುಕ್ರವಾರ ರಾತ್ರಿ ಘೋಷಿಸಿದ್ದಾರೆ.
ದೆಹಲಿಯ ಜಂತರ್ ಮಂತರ್ ಸಮೀಪ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷ (AAP), ಅಖಿಲ ಭಾರತ ವಿದ್ಯಾರ್ಥಿ ಸಂಘ (AISA), ಸ್ಟೂಡೆಂಟ್ಸ್ ಫೆಡರೇಷನ್ ಆಫ್ ಇಂಡಿಯಾ (SFI), ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (NSUI), ಭಾರತೀಯ ಯುವ ಕಾಂಗ್ರೆಸ್ (IYC) ಸೇರಿದಂತೆ ವಿವಿಧ ವಿದ್ಯಾರ್ಥಿ, ಯುವಜನ ಹಾಗೂ ನಾಗರಿಕ ಸಂಘಟನೆಗಳ ಸದಸ್ಯರು ಪಾಲ್ಗೊಂಡಿದ್ದರು.
ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ರಾಜಕೀಯ ಮುಖಂಡರು, ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 1,000 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ಬಹುತೇಕ ಪ್ರತಿಭಟನಾಕಾರರನ್ನು ಬಿಡುಗಡೆ ಮಾಡಲಾಗಿದೆ. ಪ್ರತಿಭಟನಾಕಾರರನ್ನು ತಡೆಯುವ ವೇಳೆ ಕೆಲವೆಡೆ ಸಣ್ಣಪುಟ್ಟ ಘರ್ಷಣೆಗಳು ನಡೆದಿದ್ದು, ಕೆಲವು ಪೊಲೀಸ್ ಸಿಬ್ಬಂದಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪಿಟಿಐ ವರದಿ ಮಾಡಿದೆ.
ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ನವದೆಹಲಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಲುಟಿಯನ್ಸ್ ವಲಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು 5,000 ದೆಹಲಿ ಪೊಲೀಸ್ ಮತ್ತು ಅರೆಸೇನಾ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಅರೆಸೇನಾ ಪಡೆಗಳ 10ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿತ್ತು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರ ದೆಹಲಿಯಲ್ಲಿ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಭದ್ರತಾ ಕ್ರಮದ ಭಾಗವಾಗಿ ರಾಜೀವ್ ಚೌಕ್ ಮತ್ತು ಸೆಂಟ್ರಲ್ ಸೆಕ್ರೆಟರಿಯೇಟ್ ಸೇರಿದಂತೆ 12 ಮೆಟ್ರೋ ನಿಲ್ದಾಣಗಳ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ಮುಚ್ಚಲಾಗಿತ್ತು. ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ದೆಹಲಿಯ ಪ್ರಮುಖ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.
ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ದಿ ಇಂಡಿಯನ್ ಎಕ್ಸ್‌ಪ್ರೆಸ್ ನಡೆಸಿದ ತನಿಖಾ ವರದಿ ಪ್ರಕಟವಾದ ಬೆನ್ನಲ್ಲೇ ಈ ಪ್ರತಿಭಟನೆಗಳು ನಡೆದಿವೆ. ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು 10 ತಿಂಗಳ ಅವಧಿಯಲ್ಲಿ ಆಯೋಗದ ಹೆಸರಿನಲ್ಲಿ ಕೈಗೊಳ್ಳಲಾದ ನಿರ್ಧಾರಗಳ ಬಗ್ಗೆ 14 ಬಾರಿ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ವರದಿ ತಿಳಿಸಿತ್ತು.
ಹೊಸ ಮತದಾರರ ನೋಂದಣಿಗಾಗಿ ಬಳಸುವ ಫಾರ್ಮ್-6ನಲ್ಲಿನ ಬದಲಾವಣೆ ಹಾಗೂ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಗಳನ್ನು ಸಿದ್ಧಪಡಿಸಲು ಬಳಸಲಾದ ಇಸಿಐನೆಟ್ ತಂತ್ರಾಂಶದ ಕೇಂದ್ರೀಕೃತ ನಿಯಂತ್ರಣವೂ ಈ ಆಕ್ಷೇಪಗಳಿಗೆ ಸಂಬಂಧಿಸಿದ್ದವು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.
ಇದನ್ನೂ ಓದಿ: ಜಂತರ್ ಮಂತರ್‌ನತ್ತ ಮತ್ತೆ ಯುವಜನ; ಈ ಬಾರಿ ಅಮಿತ್ ಶಾ ರಾಜೀನಾಮೆಗೆ ಆಗ್ರಹ ಸಾಧ್ಯತೆ, ಆ.5ರಂದು ಸಿಜೆಪಿ ಸಭೆ
ಈ ಬೆಳವಣಿಗೆಗಳ ಬೆನ್ನಲ್ಲೇ ಚುನಾವಣಾ ಆಯೋಗದ ಪಾರದರ್ಶಕತೆ ಮತ್ತು ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ಕುರಿತು ಪ್ರಶ್ನೆಗಳು ಎದ್ದಿದ್ದು, ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಮುಂದುವರಿದಿದೆ. ಶನಿವಾರ ಜಂತರ್ ಮಂತರ್‌ನಲ್ಲಿ ಮತ್ತೆ ಪ್ರತಿಭಟನೆ ನಡೆಸಲು ನೇಹಾ ಬೋರಾ ಕರೆ ನೀಡಿದ್ದು, ಮುಂದಿನ ಬೆಳವಣಿಗೆಗಳ ಮೇಲೆ ಕುತೂಹಲ ಮೂಡಿದೆ.
ಯುವಜನರು ಮತ್ತು ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರನ್ನು ತಡೆಯಲು ಪೊಲೀಸರು ಕೈಗೊಂಡಿರುವ ಕ್ರಮಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರ ಮತ್ತು ಸಾಂವಿಧಾನಿಕ ಸಂಸ್ಥೆಗಳ ನಿರ್ಧಾರಗಳನ್ನು ಪ್ರಶ್ನಿಸುವ ಹಕ್ಕು ನಾಗರಿಕರಿಗಿದೆ. ಆದರೆ, ಅನುಮತಿ ನಿರಾಕರಣೆ, ನಿಷೇಧಾಜ್ಞೆ ಜಾರಿ, ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವುದು ಹಾಗೂ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸುವಂತಹ ಕ್ರಮಗಳು ಪ್ರತಿಭಟನೆಯ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ನಿರ್ಬಂಧಗಳ ಕುರಿತ ಚರ್ಚೆಯನ್ನು ಹುಟ್ಟುಹಾಕಿವೆ.
ಯುವಜನರ ಪ್ರತಿಭಟನೆಗೆ ರಾಜಕೀಯವಾಗಿ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂಬುದು ಕೂಡ ಇಲ್ಲಿ ಗಮನಾರ್ಹ. ಪ್ರತಿಭಟನಾಕಾರರನ್ನು ಹತ್ತಿಕ್ಕುವ ಕ್ರಮಗಳ ಹಿಂದೆ ಕೇಂದ್ರ ಬಿಜೆಪಿ ಸರ್ಕಾರದ ಕೈವಾಡವಿದೆ ಎನ್ನಲಾಗುತ್ತಿದೆ. ಚುನಾವಣಾ ಆಯೋಗದ ಕಾರ್ಯವೈಖರಿ ಮತ್ತು ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಎದ್ದಿರುವ ಪ್ರಶ್ನೆಗಳಿಗೆ ಉತ್ತರ ನೀಡುವ ಬದಲು ಪ್ರತಿಭಟನೆಗೆ ನಿರ್ಬಂಧ ವಿಧಿಸಲಾಗುತ್ತಿದೆಯೇ ಎಂಬ ಪ್ರಶ್ನೆಯೂ ಮುನ್ನೆಲೆಗೆ ಬಂದಿದೆ. ಪ್ರತಿಭಟನೆ ನಡೆಯುತ್ತಿರುವುದು ಇಸಿ ವಿರುದ್ಧ ಆದರೆ ಪ್ರತಿಕ್ರಿಯೆ ನೀಡುತ್ತಿರುವುದು ಬಿಜೆಪಿ ಎಂಬ ಟೀಕೆಗೂ ವ್ಯಕ್ತವಾಗುತ್ತಿದೆ.




