ದೆಹಲಿಯಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ದೆಹಲಿ ಪೊಲೀಸರು ನಡೆಸಿದ ಲಾಠಿಚಾರ್ಜ್ ವಿರುದ್ಧದ ಹೋರಾಟ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಮಂಗಳವಾರ, ಪ್ರಧಾನಿ ನರೇಂದ್ರ ಮೋದಿ ನಿವಾಸದ ಎದುರು ಧರಣಿ ನಡೆಸಿದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಮತ್ತು ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಹಲವು ಗಂಟೆಗಳ ಕಾಲ ವಶದಲ್ಲಿಟ್ಟ ಬಳಿಕ ರಾತ್ರಿ ಅವರನ್ನು ಬಿಡುಗಡೆ ಮಾಡಲಾಗಿತ್ತು.
ಬಂಧನದಿಂದ ಬಿಡುಗಡೆಯಾದ ನಂತರ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ಮುಂದೆ ಐದು ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ;
- ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದಕ್ಕಾಗಿ ನೈತಿಕ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು.
- ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಎಲ್ಲ ಪ್ರಕರಣಗಳನ್ನು ಹಿಂಪಡೆಯಬೇಕು
- ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು.
- ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳ ಮೇಲಿನ ದಾಳಿ ಕುರಿತು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸಮಗ್ರ ಚರ್ಚೆ ನಡೆಸಬೇಕು.
- ಪರೀಕ್ಷಾ ವ್ಯವಸ್ಥೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ತಕ್ಷಣ ಸುಧಾರಣೆಗಳನ್ನು ಜಾರಿಗೆ ತರಬೇಕು.
ಪೊಲೀಸ್ ವಶದಲ್ಲಿದ್ದಾಗಲೇ ಬಿಡುಗಡೆ ಮಾಡಿದ ವಿಡಿಯೋ ಸಂದೇಶದಲ್ಲಿ ರಾಹುಲ್ ಗಾಂಧಿ ದೇಶದ ಶಿಕ್ಷಣ ವ್ಯವಸ್ಥೆಯನ್ನೇ ಪ್ರಶ್ನಿಸಿದ್ದರು. “ದೇಶದ ಶಿಕ್ಷಣ ವ್ಯವಸ್ಥೆ ಏಕೆ ಕುಸಿಯುತ್ತಿದೆ? ಪ್ರಶ್ನೆಪತ್ರಿಕೆಗಳು ಮತ್ತೆ ಮತ್ತೆ ಹೇಗೆ ಸೋರಿಕೆಯಾಗುತ್ತಿವೆ? ಶಿಕ್ಷಣ ಏಕೆ ಇಷ್ಟು ದುಬಾರಿಯಾಗಿದೆ? ಮಕ್ಕಳಿಗೆ ಶಿಕ್ಷಣ ಕೊಡಲು ಕುಟುಂಬಗಳು ತಮ್ಮ ಆರ್ಥಿಕ ಬದುಕನ್ನೇ ಏಕೆ ಹಾಳು ಮಾಡಿಕೊಳ್ಳಬೇಕಾಗಿದೆ? ಇವು ವಿದ್ಯಾರ್ಥಿಗಳು ಕೇಳುತ್ತಿರುವ ನ್ಯಾಯಸಮ್ಮತ ಪ್ರಶ್ನೆಗಳು” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
“ಶಿಕ್ಷಣ ವ್ಯವಸ್ಥೆಯ ಲೋಪಗಳು ಮತ್ತು ವಿದ್ಯಾರ್ಥಿಗಳ ಮೇಲಿನ ದಾಳಿ ಕುರಿತು ಬುಧವಾರ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಚರ್ಚೆ ನಡೆಯಲೇಬೇಕು ಎಂಬುದು ಎಲ್ಲ ವಿಪಕ್ಷಗಳ ಒಮ್ಮತದ ಬೇಡಿಕೆಯಾಗಿದೆ. ವಿದ್ಯಾರ್ಥಿಗಳ ಪರವಾಗಿ ದೇಶದಾದ್ಯಂತ ಹೋರಾಟ ನಡೆಸುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದಗಳು” ಎಂದಿದ್ದಾರೆ.




