ಸಹಪಾಠಿ ವಿದ್ಯಾರ್ಥಿನಿಯೊಬ್ಬಳು ಮೈಬಣ್ಣದ ಕುರಿತು ಅಪಹಾಸ್ಯ ಮಾಡಿದ್ದರಿಂದ ಮನನೊಂದ 8ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ರಾಜಸ್ಥಾನದ ಧೋಲ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು 16 ವರ್ಷದ ರಾಹುಲ್ ಎಂದು ಗುರುತಿಸಲಾಗಿದೆ.
ಮೂಲತಃ ಮಧ್ಯಪ್ರದೇಶದ ತಕ್ರೌಲಿ ಗ್ರಾಮದವನಾದ ರಾಹುಲ್, ವಿದ್ಯಾಭ್ಯಾಸದ ಹಿನ್ನೆಲೆಯಲ್ಲಿ ರಾಜಸ್ಥಾನದಲ್ಲಿರುವ ತನ್ನ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು ಎಂದು ತಿಳಿದುಬಂದಿದೆ.
ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಕಳೆದ ಗುರುವಾರ ಶಾಲೆಯಲ್ಲಿ ರಾಹುಲ್ ಮತ್ತು ಆತನ ಸಹಪಾಠಿ ವಿದ್ಯಾರ್ಥಿನಿಯ ನಡುವೆ ಸಣ್ಣ ವಿಷಯಕ್ಕೆ ಜಗಳ ನಡೆದಿತ್ತು. ಈ ವೇಳೆ, ಆ ವಿದ್ಯಾರ್ಥಿನಿ ರಾಹುಲ್‌ನ ಮೈಬಣ್ಣದ ಬಗ್ಗೆ ಅತ್ಯಂತ ಕೀಳಾದ ಮತ್ತು ನಿಂದನಾತ್ಮಕ ಪದಗಳನ್ನು ಬಳಸಿದ್ದರು ಎನ್ನಲಾಗಿದೆ.
ಶಾಲೆಯಲ್ಲಿ ನಡೆದ ಈ ಘಟನೆಯಿಂದ ತೀವ್ರವಾಗಿ ನೊಂದ ರಾಹುಲ್, ಅದೇ ದಿನ ಸಂಜೆ ಮನೆಗೆ ಮರಳಿ ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ ಬೆಳಗ್ಗೆಯಾದರೂ ರಾಹುಲ್ ಕೋಣೆಯಿಂದ ಹೊರಗೆ ಬಾರದಿದ್ದಾಗ ಅನುಮಾನಗೊಂಡ ಮನೆಯವರು ಕಿಟಕಿ ಮೂಲಕ ಇಣುಕಿ ನೋಡಿದ್ದಾರೆ. ಈ ವೇಳೆ ಆತನ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ.
ಮೃತನ ಪೋಷಕರು ಸ್ಥಳಕ್ಕೆ ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಿ ದೇಹವನ್ನು ಅಂತ್ಯಸಂಸ್ಕಾರಕ್ಕಾಗಿ ಹಸ್ತಾಂತರಿಸಲಾಗಿದೆ. ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಬ್-ಇನ್ಸ್‌ಪೆಕ್ಟರ್ ಹರ್ವೀರ್ ಸಿಂಗ್, ಘಟನೆಯ ಸಂಪೂರ್ಣ ವಿವರಣೆಯನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿಸಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.




