ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಮೂರರಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡ ನಂತರ ವಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ತನ್ನ ಒಕ್ಕೂಟದ ಪಕ್ಷಗಳ ನಾಯಕರಿಗೆ ಡಿಸೆಂಬರ್ 6ರಂದು ನಡೆಯುವ ಸಭೆಗೆ ಆಹ್ವಾನಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಮುಖ ಪಕ್ಷಗಳ ನಾಯಕರಾದ ಡಿಎಂಕೆ, ತೃಣಮೂಲ ಕಾಂಗ್ರೆಸ್ ಸೇರಿದಂತೆ ಮೈತ್ರಿ ಪಕ್ಷದ ನಾಯಕರನ್ನು ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಸಭೆ ಸೇರಿ ಮುಂದಿನ ಲೋಕಸಭೆ ಚುನಾವಣೆಗೆ ರಣತಂತ್ರ ರೂಪಿಸಲು ಇಂಡಿಯಾ ಬಣದ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಇಂಡಿಯಾ ಬಣದಲ್ಲಿ ಬಿಜೆಪಿ ವಿರುದ್ಧ 28 ಪಕ್ಷಗಳು ಒಗ್ಗೂಡಿವೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸುವುದು ಈ ಬಣದ ಪ್ರಮುಖ ಗುರಿಯಾಗಿದೆ.ಇಂಡಿಯಾ ಒಕ್ಕೂಟದ ನಾಯಕರು ದೇಶದ ವಿವಿಧೆಡೆ ಜಂಟಿ ರ್‍ಯಾಲಿ ನಡೆಸಲು ಸಿದ್ಧತೆ ನಡೆಸಿದ್ದರು. ಆದರೆ ವಿಧಾನಸಭೆ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಅದಕ್ಕೆ ತಾತ್ಕಾಲಿಕವಾಗಿ ಮುಂದೂಡಲಾಯಿತು.
ಈ ಸುದ್ದಿ ಓದಿದ್ದೀರಾ? ರಾಜಸ್ಥಾನ | ಬಿಜೆಪಿ ವಿರುದ್ಧ ಬಂಡಾಯವೆದ್ದ 26 ವರ್ಷದ ಸ್ವತಂತ್ರ ಅಭ್ಯರ್ಥಿಗೆ ಭಾರಿ ಮುನ್ನಡೆ
2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಆಡಳಿತಾರೂಢ ಎನ್‌ಡಿಎ ಒಕ್ಕೂಟವನ್ನು ಎದುರಿಸಲು ಜುಲೈ 2023 ರಲ್ಲಿ ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷದ ಸಭೆಯಲ್ಲಿ ಇಂಡಿಯಾ ಮೈತ್ರಿಕೂಟವನ್ನು ರಚಿಸಲಾಯಿತು.
‘ಇಂಡಿಯಾ’ವು ಒಕ್ಕೂಟದ ಕೊನೆಯ ಸಭೆಯನ್ನು ಮುಂಬೈನಲ್ಲಿ ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಆಯೋಜಿಸಿದ್ದರು ಮತ್ತು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಐದು ರಾಜ್ಯಗಳ ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಹಾಜರಿದ್ದರು.
ಎರಡು ದಿನಗಳ ಕಾಲ ನಡೆದ ಚರ್ಚೆಗಳಲ್ಲಿ, ಒಕ್ಕೂಟದ ನಾಯಕರು ಮುಂಬರುವ ಸಾರ್ವತ್ರಿಕ ಚುನಾವಣೆಗಳಲ್ಲಿ ಕಾರ್ಯತಂತ್ರ ರೂಪಿಸುವ ಬಗ್ಗೆ ಸಮನ್ವಯ ಸಮಿತಿಯನ್ನು ರಚಿಸಿತು. ಅಲ್ಲದೆ 2024 ರ ಲೋಕಸಭಾ ಚುನಾವಣೆಗಳನ್ನು ‘ಸಾಧ್ಯವಾದಷ್ಟು’ ಒಟ್ಟಾಗಿ ಹೋರಾಡಲು ಮೂರು ಅಂಶಗಳ ನಿರ್ಣಯವನ್ನು ಅಂಗೀಕರಿಸಿತು.