ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಹಾಗೂ ಚುನಾವಣಾ ಆಯುಕ್ತರ ನೇಮಕಾತಿ ಮತ್ತು ಸೇವಾ ಷರತ್ತುಗಳನ್ನು ನಿಯಂತ್ರಿಸುವುದಕ್ಕಾಗಿ ಇತ್ತೀಚೆಗೆ ಜಾರಿಗೆ ತಂದ ಕಾಯಿದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ನೂತನ ಕಾಯಿದೆಯು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ತತ್ವವನ್ನು ಉಲ್ಲಂಘಿಸುತ್ತದೆ. ಏಕೆಂದರೆ ಇದು ಚುನಾವಣಾ ಆಯೋಗದ ಸದಸ್ಯರ ನೇಮಕಾತಿಗೆ “ಸ್ವತಂತ್ರ ಕಾರ್ಯವಿಧಾನವನ್ನು” ಒದಗಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕರಾದ ಡಾ. ಜಯಾ ಠಾಕೂರ್ ಮತ್ತು ಸಂಜಯ್ ನಾರಾಯಣರಾವ್ ಮೆಶ್ರಮ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ ವಾದಿಸಲಾಗಿದೆ.
ಭಾರತದ ಚುನಾವಣಾ ಆಯೋಗದ ಆಯುಕ್ತರ ನೇಮಕಾತಿಯ ಪ್ರಕ್ರಿಯೆಯನ್ನು ವಿವರಿಸುವ ಕಾಯಿದೆಯ ಸೆಕ್ಷನ್ 7 ಮತ್ತು 8 ನ್ನು ಅರ್ಜಿಯು ನಿರ್ದಿಷ್ಟವಾಗಿ ಪ್ರಶ್ನಿಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೊಸವರ್ಷದ ಹೊಸ್ತಿಲಲ್ಲಿ ನಮ್ಮನ್ನಗಲಿದ ನಿಜಾಯತಿಯ ಪತ್ರಕರ್ತ ಜಾನ್ ಪಿಲ್ಜರ್
ಕೇಂದ್ರ ಚುನಾವಣಾ ಆಯೋಗದ ಸದಸ್ಯರ ನೇಮಕದಲ್ಲಿ ಮುಖ್ಯ ನ್ಯಾಯಮೂರ್ತಿಗಳನ್ನು ಸೇರ್ಪಡೆಗೊಳಿಸದಿರುವುದು ಅನೂಪ್ ಬರ್ನಾವಾಲಾ ವರ್ಸಸ್ ಕೇಂದ್ರ ಸರ್ಕಾರದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ತಿಳಿಸಿದ್ದಾರೆ
ಮುಖ್ಯ ಚುನಾವಣಾ ಆಯುಕ್ತರು ಹಾಗೂ ಚುನಾವಣಾ ಆಯುಕ್ತರ (ನೇಮಕಾತಿ ಷರತ್ತುಗಳು ಮತ್ತು ಅಧಿಕಾರದ ಅವಧಿ) ಮಸೂದೆ- 2023ರ ಪ್ರಕಾರ, ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ ಹುದ್ದೆಗಳನ್ನು ಪ್ರಧಾನಿ, ಕೇಂದ್ರ ಸಂಪುಟ ಸಚಿವರು ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಆಯ್ಕೆ ಸಮಿತಿ ನೇಮಕ ಮಾಡಬಹುದಾಗಿದೆ.
ಮಸೂದೆಯನ್ನು ಕಳೆದ ತಿಂಗಳು ಸಂಸತ್ತು ಅಂಗೀಕರಿಸಿತ್ತು. ಡಿಸೆಂಬರ್ 29, 2023ರಂದು ರಾಷ್ಟ್ರಪತಿಗಳು ಅಂಕಿತ ಹಾಕಿದ್ದರು.