ನ್ಯಾಯಾಧೀಶರೊಬ್ಬರು ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು ಹೋದಾಗ ಮನೆಯಲ್ಲಿ ಕೋಟ್ಯಂತರ ರೂಪಾಯಿ ಹಣ ಪತ್ತೆಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಹಣ ಪತ್ತೆಯಾದ ಬೆನ್ನಲ್ಲೇ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ.
ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶ ಯಶವಂತ್ ವರ್ಮಾ ಅವರ ಮನೆಯಲ್ಲಿ ಹಣ ಪತ್ತೆಯಾಗಿದೆ. ಅವರನ್ನು ಅಲಹಾಬಾದ್ ಹೈಕೋರ್ಟ್ ವರ್ಗಾವಣೆ ಮಾಡಿ, ಸುಪ್ರೀಂ ಕೋರ್ಟ್ ಕೊಲಿಜಿಯಂ ಆದೇಶಿಸಿದೆ.
ಯಶವಂತ್ ವರ್ಮಾ ಅವರ ಮನೆಯಲ್ಲಿ ಮಾರ್ಚ್ 14ರಂದು ಬೆಂಕಿ ಅವಘಡ ಸಂಭವಿಸಿತ್ತು. ಅವಘಡ ಸಂಭವಿಸಿದಾಗ, ವರ್ಮಾ ಅವರು ದೆಹಲಿಯಲ್ಲಿ ಇರಲಿಲ್ಲ. ಹೀಗಾಗಿ, ಅವರ ಕುಟುಂಬಸ್ಥರು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಾಗಿ ಕರೆ ಮಾಡಿದ್ದಾರೆ. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಿದ್ದಾರೆ. ಈ ವೇಳೆ, ಒಂದು ಕೋಣೆಯಲ್ಲಿ ಕೋಟ್ಯಂತರ ರೂಪಾಯಿ ಹಣ ಪತ್ತೆಯಾಗಿದೆ.
ಆ ಹಣ ಅನಾಮಧೇಯ ಹಣ ಇರಬಹುದು ಎಂದು ಅನುಮಾನಗೊಂಡ ಪೊಲೀಸರು ಗೃಹ ಸಚಿವಾಲಯಕ್ಕೆ ಮಾಹಿತಿ ನೀಡಿದ್ದಾರೆ. ಸಚಿವಾಲಯವು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ (ಸಿಜೆಐ) ವರದಿ ಸಲ್ಲಿಸಿದೆ. ವರದಿ ಗಮನಿಸಿದ ಸಿಜೆಐ ಸಂಜೀವ್ ಖನ್ನಾ ನೇತೃತ್ವದ ಕೊಲಿಜಿಯಂ ನ್ಯಾಯಾಧೀಶ ವರ್ಮಾ ಅವರನ್ನು ವರ್ಗಾವಣೆ ಮಾಡಲು ನಿರ್ಧರಿಸಿದ್ದು, ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದೆ.