14 ವರ್ಷದ ದಲಿತ ಬಾಲಕಿಯನ್ನು ದುಷ್ಕರ್ಮಿಗಳು ಅಪಹರಿಸಿ, ಚಿತ್ರಹಿಂಸೆ ನೀಡಿ, ಪದೇ-ಪದೇ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಕೃತ್ಯ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ.
ಅತ್ಯಾಚಾರಗಳ ರಾಜಧಾನಿ ಎಂದೇ ಕುಖ್ಯಾತಿ ಪಡೆದಿರುವ ಉತ್ತರ ಪ್ರದೇಶ ಮತ್ತೊಂದು ಅಮಾನುಷ ಅತ್ಯಾಚಾರ ಕೃತ್ಯಕ್ಕೆ ಸಾಕ್ಷಿಯಾಗಿದೆ. ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ದುಷ್ಕರ್ಮಿಗಳಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಬಾಲಕಿಯ ಪೋಷಕರು ಭಗತ್‌ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ, “2025ರ ಜನವರಿ 2ರಂದು ಬಾಲಕಿ ತನ್ನ ಬಟ್ಟೆ ಹೊಲಿಸಲು ಟೈಲರ್ ಅಂಗಡಿ ಹೋಗುತ್ತಿದ್ದಾಗ, ಆಕೆಯನ್ನು ಆರೋಪಿಯೊಬ್ಬ ಕಾರಿನಲ್ಲಿ ಅಪಹರಿಸಿದ್ದಾನೆ. ಮಾದಕ ವಸ್ತು ಬಳಸಿ ಆಕೆಯ ಪ್ರಜ್ಞೆ ತಪ್ಪಿಸಿದ್ದಾನೆ. ಬಳಿಕ, ಭೋಜ್‌ಪುರ ಪ್ರದೇಶಕ್ಕೆ ಕರೆದೊಯ್ದು ಕೋಣೆಯೊಂದರಲ್ಲಿ ಕೂಡಿಹಾಕಿದ್ದಾನೆ. ಹಲವು ದಿನಗಳ ಕಾಲ ಆರೋಪಿಗಳು ಆಕೆಯ ಮೇಲೆ ಪದೇ-ಪದೇ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆಕೆಯ ಕೈಯನ್ನು ಆಸಿಡ್‌ನಿಂದ ಸುಡಲಾಗಿದೆ” ಎಂದು ವಿವರಿಸಿದ್ದಾರೆ. ಅಲ್ಲದೆ, ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ ಕುಟುಂಬಸ್ಥರನ್ನು ಕೊಲ್ಲುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು ಎಂದು ತಿಳಿಸಿದ್ದಾರೆ.
ಬಾಲಕಿಯ ಪೋಷಕರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಮತ್ತು ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ. ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು. ಪ್ರತಿಯೊಬ್ಬರೂ ಸಮಾನತೆ ಮತ್ತು ಭದ್ರತೆಯಿಂದ ಬದುಕುವ ಹಕ್ಕನ್ನು ಹೊಂದಿದ್ದಾರೆ. ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.