ತೃಣಮೂಲ ಕಾಂಗ್ರೆಸ್ (TMC) ನಾಯಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಭವಾನಿಪುರ ಕ್ಷೇತ್ರದ ಫಲಿತಾಂಶವನ್ನು ಪ್ರಶ್ನಿಸಿ ಇಂದು (ಜೂ.16) ಕಲ್ಕತ್ತಾ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಕ್ಷೇತ್ರದಲ್ಲಿ ಅವರು ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದರು.
ತಮ್ಮದೇ ಭದ್ರಕೋಟೆಯಾಗಿದ್ದ ಭವಾನಿಪುರ ಕ್ಷೇತ್ರದಲ್ಲಿ (2021 ರಿಂದ ಮಮತಾ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು) ಮಮತಾ ಬ್ಯಾನರ್ಜಿ ಅವರು ಸುವೇಂದು ಅಧಿಕಾರಿ ವಿರುದ್ಧ 15,000ಕ್ಕೂ ಹೆಚ್ಚು ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯು ಮೇ 4ರಂದು ನಡೆದಿತ್ತು. ಈ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೇರಿದ್ದು, ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇದನ್ನೂ ಓದಿ: ವಕೀಲರ ಸಮವಸ್ತ್ರದಲ್ಲಿ ಹೈಕೋರ್ಟ್‌ಗೆ ಬಂದ ಮಮತಾ ಬ್ಯಾನರ್ಜಿ
ವಿಶೇಷವೆಂದರೆ, ಈ ಹಿಂದೆ 2021ರ ವಿಧಾನಸಭಾ ಚುನಾವಣೆಯಲ್ಲೂ ಮಮತಾ ಬ್ಯಾನರ್ಜಿ ಅವರು ಪೂರ್ವ ಮಿಡ್ನಾಪುರ ಜಿಲ್ಲೆಯ ನಂದಿಗ್ರಾಮ ಕ್ಷೇತ್ರದಲ್ಲಿ ಇದೇ ಸುವೇಂದು ಅಧಿಕಾರಿ ವಿರುದ್ಧ 2,000 ಮತಗಳ ಅಂತರದಿಂದ ಸೋತಾಗಲೂ ಫಲಿತಾಂಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆ ಪ್ರಕರಣ ಇಂದಿಗೂ ನ್ಯಾಯಾಲಯದಲ್ಲಿ ಬಾಕಿ ಉಳಿದಿದೆ.




