ಪತ್ರಿಕಾಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಅಧ್ಯಕ್ಷ ಮತ್ತು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರಿಗೆ ಭಾರತ ಚುನಾವಣಾ ಆಯೋಗ ಬುಧವಾರ ನೋಟಿಸ್ ಜಾರಿ ಮಾಡಿದೆ.
ಏಪ್ರಿಲ್ 5 ರಂದು ಸಿರ್ಸಿಲ್ಲಾದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಕೆಸಿಆರ್ ಅವರು ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜಿ ನಿರಂಜನ್ ಅವರು ದೂರು ನೀಡಿದ್ದು, ಈ ದೂರಿನ ಆಧಾರದಲ್ಲಿ ಚುನಾವಣಾ ಆಯೋಗವು ಕೆಸಿಆರ್ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ.
ಕೆಸಿಆರ್ ಅವರ ಭಾಷಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ಹಲವು ಸಲಹೆಗಳು ಮತ್ತು ನೋಟಿಸ್, ಸೂಚನೆಗಳನ್ನು ನೀಡಲಾಗಿತ್ತು ಎಂದು ಆಯೋಗವು ಉಲ್ಲೇಖಿಸಿದೆ.
ಇದನ್ನು ಓದಿದ್ದೀರಾ? ಕೆಸಿಆರ್ ಪ್ರಯಾಣಿಸುತ್ತಿದ್ದ ವಾಹನ ತಪಾಸಣೆ ನಡೆಸಿದ ಚುನಾವಣಾ ಅಧಿಕಾರಿಗಳು
“ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿರಿಯ ಉಪಾಧ್ಯಕ್ಷ ಜಿ. ನಿರಂಜನ್ ಅವರಿಂದ ಏಪ್ರಿಲ್ 6 ರಂದು ಚುನಾವಣಾ ಆಯೋಗಕ್ಕೆ ದೂರು ಬಂದಿದೆ. ಈ ದೂರಿನಲ್ಲಿ ಕೆ. ಚಂದ್ರಶೇಖರ್ ರಾವ್ ಅವರು ಸಿರ್ಸಿಲ್ಲಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ವಿರುದ್ಧ ಅಸಭ್ಯ, ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.
ಏಪ್ರಿಲ್ 18 ರಂದು ಬೆಳಿಗ್ಗೆ 11 ಗಂಟೆಯೊಳಗೆ ತಮ್ಮ ಹೇಳಿಕೆಗಳಿಗೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ವಿವರಿಸುವಂತೆ ಚುನಾವಣಾ ಆಯೋಗ ಕೆಸಿಆರ್‌ಗೆ ತಿಳಿಸಿದೆ. ನಿಗದಿತ ಸಮಯದೊಳಗೆ ಪ್ರತಿಕ್ರಿಯೆ ಬಾರದಿದ್ದರೆ ಚುನಾವಣಾ ಆಯೋಗವು ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಇದನ್ನು ಓದಿದ್ದೀರಾ? ಕೇಜ್ರಿವಾಲ್ ಬಂಧನ | ಪ್ರಜಾಪ್ರಭುತ್ವದಲ್ಲಿ ಮತ್ತೊಂದು ಕರಾಳ ದಿನ: ಕೆಸಿಆರ್
ಈ ನಡುವೆ 2024 ರ ಮಾರ್ಚ್ 16 ರಿಂದ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಾದ ಬಳಿಕ ಚುನಾವಣಾ ಆಯೋಗವು ಕೈಗೊಂಡ ಕ್ರಮಗಳನ್ನು ಭಾರತೀಯ ಚುನಾವಣಾ ಆಯೋಗ (ಇಸಿ) ಮಂಗಳವಾರ ಬಹಿರಂಗಪಡಿಸಿದೆ.
ಒಟ್ಟು ದೂರುಗಳಲ್ಲಿ 51 ಬಿಜೆಪಿ ನೀಡಿದ ದೂರಾಗಿದ್ದು ಈ ಪೈಕಿ 38 ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ. ಕಾಂಗ್ರೆಸ್ 59 ದೂರು ನೀಡಿದ್ದು ಈ ಪೈಕಿ 51 ಪ್ರಕರಣದಲ್ಲಿ ಕ್ರಮಕೈಗೊಳ್ಳಲಾಗಿದೆ. ಇತರೆ ಪಕ್ಷಗಳಿಂದ 90 ದೂರುಗಳು ಬಂದಿದ್ದು, ಈ ಪೈಕಿ 80 ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ.
ಮಹಿಳೆಯರ ವಿರುದ್ಧ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ ಪಕ್ಷಗಳ ಮುಖಂಡರಿಗೆ ನೋಟಿಸ್ ಜಾರಿ ಮಾಡುವ ಮೂಲಕ ಮಹಿಳೆಯರ ಘನತೆ ಮತ್ತು ಗೌರವವನ್ನು ಎತ್ತಿ ಹಿಡಿಯುವ ದೃಢವಾದ ನಿಲುವು ತೆಗೆದುಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.