ಕರೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಮತ್ತು ಇತರ ನಾಯಕರ ವಿರುದ್ಧ ಸಾರ್ವಜನಿಕ ಹೇಳಿಕೆ ನೀಡದಂತೆ ನಿರ್ಬಂಧ ಹೇರಲು ಕೋರಿ ಡಿಎಂಕೆ ಶುಕ್ರವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್ ಎಸ್ ಭಾರತಿ ಅವರು ಈ ಅರ್ಜಿಯನ್ನು ಸಲ್ಲಿಸಿದ್ದು, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಂಗ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವ ಅಪಾಯವನ್ನು ಉಲ್ಲೇಖಿಸಿದ್ದಾರೆ. ಆರೋಪಿಗಳು ಸಿಬಿಐ ತನಿಖೆಯ ಕುರಿತು ಸಾರ್ವಜನಿಕ ಹೇಳಿಕೆ ನೀಡುವುದನ್ನು ಅಥವಾ ‘ಸುಳ್ಳು ಆರೋಪ’ ಮಾಡುವುದನ್ನು ತಡೆಯಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ
2025ರ ಸೆಪ್ಟೆಂಬರ್ 27ರಂದು ಕರೂರಿನಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮೆರವಣಿಗೆ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 41 ಮಂದಿ ಸಾವನ್ನಪ್ಪಿದ್ದಾರೆ. 140ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಇದಾದ ಬಳಿಕ 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ವಿಜಯ್ ಮುಖ್ಯಮಂತ್ರಿಯಾಗಿದ್ದಾರೆ. ಈ ಪ್ರಕರಣದಲ್ಲಿ ಆರಂಭದಲ್ಲಿ ಚಾರ್ಜ್‌ಶೀಟ್‌ಗೆ ಒಳಗಾಗಿದ್ದ ಹಲವರು ಈಗ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದಾರೆ. ಸದ್ಯ ಈ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ಸಿಬಿಐ ನಡೆಸುತ್ತಿದೆ.
ಈ ಪ್ರಕರಣ ಸಂಬಂಧ ಜುಲೈ 2ರಂದು ಸಚಿವ ಆಧವ್ ಅರ್ಜುನ ಅವರು, “ಹಿಂದಿನ ಡಿಎಂಕೆ ಸರ್ಕಾರವೇ ಪೊಲೀಸರ ಮೂಲಕ ಕರೂರು ಜನರನ್ನು ಕೊಲ್ಲಿಸಿದೆ” ಎಂದು ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಅರ್ಜಿಯಲ್ಲಿ ಪ್ರಮುಖವಾಗಿ ಉಲ್ಲೇಖಿಸಲಾಗಿದೆ. ಇಂತಹ ಹೇಳಿಕೆಗಳು ತನಿಖೆಯ ದಿಕ್ಕನ್ನು ತಪ್ಪಿಸುವ ಉದ್ದೇಶ ಹೊಂದಿವೆ ಎಂದು ಡಿಎಂಕೆ ವಾದಿಸಿದೆ.




