ಗ್ರಾಮೀಣ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರೊಬ್ಬರನ್ನು ಗ್ರಾಮದ ಕೆಲವರು ಮರಕ್ಕೆ ಕಟ್ಟಿಹಾಕಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಅಮಾನುಷ ಘಟನೆ ಬಿಹಾರದ ಗಯಾ ಜಿಲ್ಲೆಯ ಫತೇಪುರ ಪ್ರದೇಶದಲ್ಲಿ ನಡೆದಿದೆ. ಪ್ರಕರಣದಲ್ಲಿ 10 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಗಳ ಪೈಕಿ ಮೂವರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ.
ಫತೇಪುರ ಬಳಿಯ ಹರಕುರ್ಹಾ ಗ್ರಾಮದಲ್ಲಿ ಘಟನೆ ನಡೆದಿದೆ. ಆರೋಪಿಗಳು ವೈದ್ಯ ಜಿತೇಂದ್ರ ಯಾದವ್ ಅವರ ಮೇಲೆ ಅಮಾನುಷ ಕ್ರೌರ್ಯ ಎಸಗಿದ್ದಾರೆ. ಸಂತ್ರಸ್ತ ವೈದ್ಯನನ್ನು ಮಗಧ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯ ನೀಡಿದ ದೂರಿನ ಆಧಾರದ ಮೇಲೆ ಗುರ್ಪಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
10 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳಲ್ಲಿ ಮಹಿಳೆಯರೂ ಸೇರಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರ ತಂಡವನ್ನು ರಚಿಸಲಾಗಿದೆ. ಪೊಲೀಸ್ ತಂಡವು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದು, ಈವರೆಗೆ ಖುಷ್ಬೂ ದೇವಿ, ಬಸಂತಿ ದೇವಿ ಹಾಗೂ ಪುಟುಲ್ ದೇವಿ ಎಂಬ ಮೂವರನ್ನು ಬಂಧಿಸಿದ್ದಾರೆ.
ಭೂ ವಿವಾದಕ್ಕೆ ಸಂಬಂಧಿಸಿದಂತೆ ಆತನನ್ನು ಗ್ರಾಮದ ಕೆಲವರು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುವುದಾಗಿ ಎಸ್‌ಡಿಪಿಒ ಸುನಿಲ್ ಕುಮಾರ್ ಪಾಂಡೆ ಹೇಳಿದ್ದಾರೆ.