ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎನ್‌ಕೌಂಟರ್ ನಡೆದ ಸ್ಥಳದಿಂದ ಶಸ್ತ್ರಾಸ್ತಗಳನ್ನು ವಶಪಡಿಸಿಕೊಳ್ಳಲಾಗಿದ್ದು ಇದರಲ್ಲಿ ಇನ್ಸಾಸ್ ರೈಫಲ್ ಮತ್ತು ಬ್ಯಾರೆಲ್ ಗ್ರೆನೇಡ್ ಲಾಂಚರ್ (ಬಿಜಿಎಲ್) ಕೂಡಾ ಸೇರಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಛತ್ತೀಸ್‌ಗಢ | ದಲಿತ ಬಾಲಕಿ ಅತ್ಯಾಚಾರ ಪ್ರಕರಣದ ಐವರು ಆರೋಪಿಗಳಿಗೆ ಮರಣ ದಂಡನೆ
ಛತ್ತೀಸ್‌ಗಢದ ಬಿಜಾಪುರದ ಗಂಗಲೂರು ಪೊಲೀಸ್ ಠಾಣೆ ಪ್ರದೇಶದ ಕಾಡಿನಲ್ಲಿ ಶನಿವಾರ ಬೆಳಿಗ್ಗೆ 8.30 ಸುಮಾರಿಗೆ ರಾಜ್ಯ ಪೊಲೀಸರ ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯಪಡೆ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಕೋಬ್ರಾ (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಬಸ್ತಾರ್ ರೇಂಜ್) ಸುಂದರರಾಜ್ ಪಿ ತಿಳಿಸಿದ್ದಾರೆ.
ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ (ಮಾವೋವಾದಿಗಳು) ಪಶ್ಚಿಮ ಬಸ್ತಾರ್ ವಿಭಾಗದ ಕಾರ್ಯಕರ್ತರು ಈ ಪ್ರದೇಶದಲ್ಲಿ ಇದ್ದಾರೆ ಎಂಬ ಮಾಹಿತಿ ಆಧಾರದಲ್ಲಿ ಶುಕ್ರವಾರದಿಂದ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ನಕ್ಸಲ್ ಹೋರಾಟ ತ್ಯಜಿಸಿ ಮುಖ್ಯವಾಹಿನಿಗೆ ಬಂದ ರವೀಂದ್ರ ಕೋಟೆಹೊಂಡ
“ಘಟನಾ ಸ್ಥಳದಿಂದ ಎಂಟು ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೂ ಅನೇಕ ನಕ್ಸಲರು ಸಾವನ್ನಪ್ಪಿದ್ದಾರೆ ಅಥವಾ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದೇವೆ” ಎಂದು ಸುಂದರ್‌ರಾಜ್ ಹೇಳಿದರು.
ಛತ್ತೀಸ್‌ಗಢದಲ್ಲಿ ಸರ್ಕಾರವು ನಕ್ಸಲ್ ವಿರೋಧಿ ಕಾರ್ಯಾಚರಣೆ ಹೆಸರಲ್ಲಿ ಈ ವರ್ಷದ ಒಂದು ತಿಂಗಳಲ್ಲಿ ಈಗಾಗಲೇ 50 ಮಂದಿಯನ್ನು ಕೊಂದಿದ್ದಾರೆ. ಈ ಪೈಕಿ ನಕ್ಸಲರು ಎಂದು ಹಣೆಪಟ್ಟಿ ಕಟ್ಟಿ ಆದಿವಾಸಿಗಳನ್ನು ಕೂಡಾ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಜನವರಿ 20-21ರಂದು ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ 16 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಕಳೆದ ವರ್ಷ, ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 219 ನಕ್ಸಲರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.
