ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನುಬದ್ಧ ಖಾತರಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ ವರ್ಷ ನವೆಂಬರ್ 26ರಂದು ಆರಂಭಿಸಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಪಂಜಾಬ್ ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಅವರು ಇಂದು (ಏಪ್ರಿಲ್ 6, 2025) ಅಂತ್ಯಗೊಳಿಸಿದ್ದಾರೆ.
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ಅವರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ಮನವಿ ಮಾಡಿದ ಒಂದು ದಿನದ ನಂತರ ಈ ಘೋಷಣೆ ಹೊರಬಿದ್ದಿದೆ.
ಇದನ್ನು ಓದಿದ್ದೀರಾ? ರೈತರ ಬೇಡಿಕೆಗಳು ಈಡೇರುವವರೆಗೆ ಆಮರಣಾಂತ ಉಪವಾಸ ನಿಲ್ಲಿಸುವುದಿಲ್ಲ: ದಲ್ಲೇವಾಲ್
ಪಂಜಾಬ್‌ನ ಫತೇಘರ್ ಸಾಹಿಬ್ ಜಿಲ್ಲೆಯ ಸಿರ್ಹಿಂದ್‌ನಲ್ಲಿ ಆಯೋಜಿಸಲಾದ ‘ಕಿಸಾನ್ ಮಹಾಪಂಚಾಯತ್’ನಲ್ಲಿ ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುತ್ತಿರುವುದಾಗಿ ದಲ್ಲೇವಾಲ್ ಘೋಷಿಸಿದ್ದಾರೆ.
VIDEO | Punjab: Farmer leader Jagjit Singh Dallewal has announced to end his hunger strike during the Kisan Mahapanchayat held in Sirhind in Fatehgarh Sahib district. #JagjitSinghDallewal #farmersprotest pic.twitter.com/EE23DAwFAE
— Press Trust of India (@PTI_News) April 6, 2025
“ನೀವೆಲ್ಲರೂ (ರೈತರು) ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ನನ್ನನ್ನು ಕೇಳಿಕೊಂಡಿದ್ದೀರಿ. ಆಂದೋಲನವನ್ನು ಚೆನ್ನಾಗಿ ನಿಭಾಯಿಸಿದ್ದಕ್ಕಾಗಿ ನಾನು ನಿಮಗೆ ಋಣಿಯಾಗಿದ್ದೇನೆ. ನಿಮ್ಮ ಭಾವನೆಗಳನ್ನು ನಾನು ಗೌರವಿಸುತ್ತೇನೆ. ನಿಮ್ಮ ಆದೇಶವನ್ನು ನಾನು ಸ್ವೀಕರಿಸುತ್ತೇನೆ” ಎಂದು ದಲ್ಲೇವಾಲ್ ಹೇಳಿದ್ದಾರೆ.