ದೆಹಲಿಯ ಏಮ್ಸ್ ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಎಂಡೋಸ್ಕೋಪಿ ಕೊಠಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ರೋಗಿಗಳನ್ನು ಸ್ಥಳಾಂತರಿಸಲಾಗಿದೆ.
6 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.
ಬೆಳಿಗ್ಗೆ 11.54 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡ ನಂತರ ತುರ್ತು ನಿಯಂತ್ರಣ ಕೊಠಡಿಗೆ ಕರೆ ಮಾಡಿ ಎಲ್ಲ ರೋಗಿಗಳನ್ನು ಹಾಗೂ ಸಿಬ್ಬಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಏಮ್ಸ್ ನಿರ್ದೇಶಕರು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.
ಹೊರರೋಗಿ ವಿಭಾಗದ ಒಪಿಡಿ ಕಟ್ಟಡದ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣದಲ್ಲಿ ರಕ್ಷಣಾ ಕಾರ್ಯಪಡೆ ಕೈಗೊಂಡ ಹಿನ್ನೆಲೆ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? 2 ಕೋಟಿ ರೂ. ನೀಡುವಂತೆ ಆಸ್ಕರ್ ಪ್ರಶಸ್ತಿ ವಿಜೇತ ನಿರ್ಮಾಪಕರಿಗೆ ಮಾವುತ ದಂಪತಿಯಿಂದ ನೋಟಿಸ್
ಘಟನೆಯಿಂದ ಇದುವರೆಗೆ ಆಸ್ತಿಪಾಸ್ತಿಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಬೆಂಕಿ ಅನಾಹುತಕ್ಕೆ ಕಾರಣ ಕೂಡ ತಿಳಿದುಬಂದಿಲ್ಲ. ಕಟ್ಟಡದಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೆಲ ಮಾಧ್ಯಮಗಳ ವರದಿ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.