ಉತ್ತರ ಪ್ರದೇಶದ ಗಾಜಿಯಾಬಾದ್ನ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಐವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ.
ಲೋನಿ ಬಾರ್ಡರ್ ಪೊಲೀಸ್ ಠಾಣಾ ವ್ಯಾಪ್ತಿಯ ಬೆಹ್ತಾ ಹಾಜಿಪುರದಲ್ಲಿರುವ ಕಟ್ಟಡದಲ್ಲಿ ಬುಧವಾರ-ಗುರುವಾರ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ, ಪೊಲೀಸ್ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಕಟ್ಟಡದಿಂದ ಮಹಿಳೆ ಮತ್ತು ಮಗುವನ್ನು ರಕ್ಷಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಎಸಿಪಿ) ಅಂಕುರ್ ವಿಹಾರ್ ಭಾಸ್ಕರ್ ವರ್ಮಾ ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಮೊದಲ ಮತ್ತು ಎರಡನೇ ಮಹಡಿಗೆ ವ್ಯಾಪಿಸಿದೆ. ಬೆಂಕಿಯ ಜ್ವಾಲೆಗೆ ನಿವಾಸಿಗಳು ಸಿಕ್ಕಿಕೊಂಡಿದ್ದಾರೆ. ಕಟ್ಟಡದಿಂದ ಐದು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಘಾಜಿಯಾಬಾದ್ನ ಹೆಚ್ಚುವರಿ ಪೊಲೀಸ್ ಕಮಿಷನರ್ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.
ಮೃತರನ್ನು ಸೈಫುಲ್ ರೆಹಮಾನ್ (35), ಅವರ ಪತ್ನಿ ನಜೀರಾ (32), ಮಗಳು ಇಸ್ರಾ (7), ಫೈಜ್ (7 ತಿಂಗಳ) ಮತ್ತು ಫರ್ಹೀನ್ ಅಲಿಯಾಸ್ ಪರ್ವೀನ್ (25) ಎಂದು ಗುರುತಿಸಲಾಗಿದೆ.
ಗಾಯಗೊಂಡ ಅರ್ಶ್ (10) ಮತ್ತು ಉಜ್ಮಾ (25) ಅವರನ್ನು ದೆಹಲಿಯ ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದೆ.