ವಾರಾಣಾಸಿ- ಜೈಪುರ ಬಸ್, ಟ್ರಕ್ ಒಂದಕ್ಕೆ ಡಿಕ್ಕಿ ಹೊಡೆದಿದ್ದು, ಈ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿ, 19 ಮಂದಿ ಸಾವನ್ನಪ್ಪಿದ್ದಾರೆ. ಶನಿವಾರ ಬೆಳಗ್ಗೆ ಆಗ್ರಾ- ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಅಪಘಾತ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆಗ್ರಾದ ಫತೆಹಾಬಾದ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಮುಂಜಾನೆ ಸುಮಾರು 5:30 ಗಂಟೆಗೆ ಟ್ರಕ್‌ಗೆ ವಾರಾಣಾಸಿ- ಜೈಪುರ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಆಗ್ರಾದಲ್ಲಿ ಭಾರಿ ಮಳೆಯ ಆರ್ಭಟ: ತಾಜ್ ಮಹಲ್ ಗೋಡೆಗಳಲ್ಲಿ ಬಿರುಕು
ಮೃತರನ್ನು ರಾಜಸ್ಥಾನ ಮೂಲದ ಗೋವಿಂದ (68), ರಮೇಶ್ (45) ಮತ್ತು ಆಗ್ರಾ ನಿವಾಸಿ ದೀಪಕ್ ವರ್ಮಾ (40) ಎಂದು ಗುರುತಿಸಲಾಗಿದೆ. ಇನ್ನೋರ್ವ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಫತೆಹಾಬಾದ್ ಎಸಿಪಿ ಅಮರ್‌ದೀಪ್ ಲಾಲ್, “ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಓರ್ವ ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಾಳುಗಳೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.
ನಾಲ್ವರು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
