ಸರ್ಕಾರಿ ಶಾಲೆಯ ಕಟ್ಟಡವೊಂದು ಕುಸಿದು ಬಿದ್ದಿದ್ದು, ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ದುರ್ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಇನ್ನೂ ಕೆಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದು ಎಂದು ಶಂಕಿಸಲಾಗಿದೆ.
ಮನೋಹರ್ ಥಾನಾದಲ್ಲಿರುವ ಪಿಪ್ಲೋಡಿ ಸರ್ಕಾರಿ ಶಾಲೆಯಲ್ಲಿ ಶುಕ್ರವಾರ ಬೆಳಗ್ಗೆ ಘಟನೆ ನಡೆದಿದೆ. ವಿದ್ಯಾರ್ಥಿಗಳು ಶಾಲೆಗೆ ಬಂದ ಕೆಲವೇ ನಿಮಿಷಗಳಲ್ಲಿ ಕಟ್ಟಡ ಕುಸಿದಿದೆ. ಘಟನೆ ನಡೆದಾಗ, ಶಾಲಾ ಆವರಣದಲ್ಲಿ ಸುಮಾರು 40 ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಇದ್ದರು ಎಂದು ವರದಿಯಾಗಿದೆ.
ಕಟ್ಟಡದ ಅವಶೇಷಗಳ ಅಡಿಯಲ್ಲಿ ವಿದ್ಯಾರ್ಥಿಗಳು ಸಿಲುಕಿರಬಹುದು ಎಂದು ಶಂಕಿಸಲಾಗಿದ್ದು, ಅವರ ರಕ್ಷಣೆಗಾಗಿ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸರ್ಕಾರಿ ಶಾಲೆಯ ಕಟ್ಟಡ ಶಿಥಿಲಗೊಂಡು ಹಲವು ತಿಂಗಳುಗಳು ಕಳೆದಿವೆ. ಕಟ್ಟಡದ ದುರಸ್ಥಿಗಾಗಿ ಶಾಲೆಯ ಶಿಕ್ಷಕರು ಶಿಕ್ಷಣ ಇಲಾಖೆಗೆ ಮನವಿಯನ್ನೂ ಸಲ್ಲಿಸಿದ್ದರು. ಆದರೆ, ಈವೆರೆಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಆರೋಪಿಸಲಾಗಿದೆ.