ಹೈದರಾಬಾದ್ ನಗರದಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಬಾಚುಪಲ್ಲಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್‌ಮೆಂಟ್ ತಡೆಗೋಡೆ ಕುಸಿದು ನಾಲ್ಕು ವರ್ಷದ ಬಾಲಕ ಸೇರಿ ಏಳು ಜನ ಕಾರ್ಮಿಕರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ತಿರುಪತಿ (22), ಶಂಕರ್ (22), ರಾಜು (25) ಖುಷಿ (25) ರಾಮ್ ಯಾದವ್ (34), ಗೀತಾ (32), ಮತ್ತು ಹಿಮಾಂಶು (4) ಮೃತರು ಎಂದು ಗುರುತಿಸಲಾಗಿದೆ. ಮೃತ ಕಾರ್ಮಿಕರು ಒಡಿಶಾ ಮತ್ತು ಛತ್ತೀಸ್‌ಗಢ ಮೂಲದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಟ್ಟಡದ ಗೋಡೆ ಕುಸಿದು ಬಿದ್ದಿರುವ ಸ್ಥಳ ಪಕ್ಕದ ಶೆಡ್‌ನಲ್ಲಿ ಕಾರ್ಮಿಕರು ವಾಸಿಸುತ್ತಿದ್ದರು. ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಕಾರ್ಯಾಚರಣೆ ನಡೆಸಿ ಐದು ಜನ ಕಾರ್ಮಿಕರನ್ನು ರಕ್ಷಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಪ್ರಜ್ವಲ್ ಲೈಂಗಿಕ ಹಗರಣ | 9 ಸಂತ್ರಸ್ತೆಯರ ಹೇಳಿಕೆ ದಾಖಲಿಸಿಕೊಂಡಿರುವ ಎಸ್‌ಐಟಿ
ಮಂಗಳವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಹೈದರಾಬಾದ್ ನಗರದ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಟ್ರಾಫಿಕ್ ಅವ್ಯವಸ್ಥೆ, ವಿದ್ಯುತ್ ಕಡಿತ ಮತ್ತು ಅನೇಕ ಕಡೆ ರಸ್ತೆಗಳು ಜಲಾವೃತಗೊಂಡಿದ್ದವು. ನಗರದಾದ್ಯಂತ ಜಲಾವೃತ ಮತ್ತು ಬಿದ್ದ ಮರಗಳನ್ನು ತೆರವುಗೊಳಿಸಲು ವಿಪತ್ತು ಪರಿಹಾರ ಪಡೆ (ಡಿಆರ್‌ಎಫ್) ತಂಡಗಳನ್ನು ನಿಯೋಜಿಸಲಾಗಿದೆ ಎಂದು ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಮ್‌ಸಿ) ಅಧಿಕಾರಿಗಳು ತಿಳಿಸಿದ್ದಾರೆ.